ಮೋದಿ, ಅಮಿತ್ ಷಾರಿಂದ ಸಂವಿಧಾನದ ಕಗ್ಗೊಲೆ: ಕುಮಾರಸ್ವಾಮಿ ಆರೋಪ

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಸಂವಿಧಾನದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Last Updated : May 17, 2018, 11:19 AM IST
ಮೋದಿ, ಅಮಿತ್ ಷಾರಿಂದ ಸಂವಿಧಾನದ ಕಗ್ಗೊಲೆ: ಕುಮಾರಸ್ವಾಮಿ ಆರೋಪ title=

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಸಂವಿಧಾನದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದ ಮುಂದೆ ಬಹುಮತ ಇಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮೋದಿ, ಅಮಿತ್​ ಷಾರಿಂದ ಸಂವಿಧಾನದ ಕಗ್ಗೊಲೆಯಾಗುತ್ತಿದೆ. ರಾಜ್ಯಪಾಲರು ಕಾನೂನಾತ್ಮಕವಾಗಿ ಕ್ರಮ ಕೈಗೊಂಡಿಲ್ಲ. ಜೆಡಿಎಸ್​-ಕಾಂಗ್ರೆಸ್​ ಶಾಸಕರನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ. ತಮ್ಮೆಡೆ ಸೆಳೆಯಲು ಬಿಜೆಪಿ ನಮ್ಮ ಶಾಸಕರಿಗೆ ಆಮಿಷವನ್ನು ಒಡ್ಡಿದೆ. ಇ.ಡಿ. ಮೂಲಕ ಆನಂದ್ ಸಿಂಗ್ ವಿರುದ್ಧ ಇ.ಡಿ. ಛೂ ಬಿಟ್ಟಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. 

ಮುಂದುವರೆದು ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಬಗ್ಗೆ ಕಾಂಗ್ರೆಸ್​ ಜೆಡಿಎಸ್​ ನಾಯಕರು ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ. ಬಿಜೆಪಿ ಮಣಿಸಲು ಭಿನ್ನಾಭಿಪ್ರಾಯ ಮರೆತು ಎಲ್ಲಾ ಪ್ರಾದೇಶಿಕ ಪಕ್ಷಗಳು ಒಂದಾಗಬೇಕು. ಈ ನಿಟ್ಟಿನಲ್ಲಿ ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಎಲ್ಲ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಚರ್ಚೆ ನಡೆಸುವಂತೆ ನಮ್ಮ ತಂದೆ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರನ್ನು ಮನವಿ ಮಾಡುವುದಾಗಿ ಕುಮಾರಸ್ವಾಮಿ ಹೇಳಿದರು.

ಬಿಜೆಪಿಗೆ ಬಹುಮತ ಇಲ್ಲದಿದ್ದರೂ ರಾಜ್ಯಪಾಲರು ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಅಲ್ಲದೆ, ನಮ್ಮ ಶಾಸಕರನ್ನು ಖರೀದಿಸಲು ಬಿಜೆಪಿ ಮುಂದಾಗಿದೆ. ಈ ನಿಟ್ಟಿನಲ್ಲಿ ನಮ್ಮ ಶಾಸಕರನ್ನು ರಕ್ಷಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಕುಮಾರಸ್ವಾಮಿ ಹೇಳಿದರು. 

Trending News