ಮುಂಬೈ: ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿಗೆ ಆಗ್ರಹಿಸಿ ಮರಾಠ ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಸೋಮವಾರ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಚಕನ್ ಪಟ್ಟಣದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ನಂತರ ಪರ್ತಿಭಾತನೆ ಮತ್ತಷ್ಟು ಉದ್ವಿಗ್ನಗೊಂಡಿದ್ದು, ಪ್ರತಿಭಟನಾಕಾರರು ಟೈರ್ ಗಳಿಗೆ ಬೆಂಕಿ ಹಚ್ಚಿದ್ದಲ್ಲದೆ, ಹಲವು ವಾಹನಗಳಿಗೂ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ಮಧ್ಯೆ ಪ್ರತಿಭಟನಾಕಾರರು ರಾಜ್ಯ ಹೆದ್ದಾರಿಯಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಿ ರಸ್ತೆ ತಡೆ ನಡೆಸಿದ್ದಾರೆ ಎನ್ನಲಾಗಿದೆ.
ಪ್ರತಿಭಟನಾ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ ಇದ್ದರಾದರೂ ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗದ ಕಾರಣ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರ ರಾಜ್ಯಾದ್ಯಂತ ನಡೆಯುತ್ತಿರುವ ಮೀಸಲಾತಿ ಹೋರಾಟದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಲ್ಲು ತೂರಾಟ, ಅಗ್ನಿ ಸ್ಪರ್ಶ, ವಾಹನಗಳಿಗೆ ಬೆಂಕಿ ಸೇರಿದಂತೆ ಅನೇಕ ವಿಧ್ವಂಸಕ ಘಟನೆಗಳಿಂದಾಗಿ ಪೊಲೀಸರು ಲಾಠಿ ಚಾರ್ಜ್ ಕೂಡ ನಡೆಸಿದ್ದಾರೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಮೀಸಲಾತಿಗೆ ಒತ್ತಾಯಿಸಿ ಕೆಲವು ಮರಾಠ ಸಂಘಟನೆಗಳು ಇಂದು ಚಕನ್ ಬಂದ್ ಗೆ ಕರೆ ನೀಡಿದ್ದವು.
ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.