ರಾಜ್ಯದ ಇತಿಹಾಸದಲ್ಲೇ ಮೊದಲು; ರಾಜ್ಯದಾದ್ಯಂತ ಏಕಕಾಲಕ್ಕೆ “ಜನತಾ ದರ್ಶನ”!

Janta Darshan in Karnataka: ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯ್ತಿ ಸಿಇಓಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜನತಾ ದರ್ಶನ ನಡೆಸುತ್ತಾರೆ.

Written by - RACHAPPA SUTTUR | Edited by - Puttaraj K Alur | Last Updated : Sep 24, 2023, 10:09 PM IST
  • ರಾಜ್ಯದಾದ್ಯಂತ ಏಕಕಾಲಕ್ಕೆ ನಡೆಯಲಿರುವ “ಜನತಾ ದರ್ಶನ”ಕ್ಕೆ ಕರುನಾಡು ನಾಳೆ ಸಾಕ್ಷಿಯಾಗಲಿದೆ
  • ಸಿಎಂ ಸಿದ್ದರಾಮಯ್ಯರ ಸೂಚನೆ ಮೇರೆಗೆ ನಡೆಯಲಿರುವ ಅರ್ಥಪೂರ್ಣ ಕಾರ್ಯಕ್ರಮ
  • ಡಿಸಿ, ಜಿಪಂ ಸಿಇಓ & ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲೆ ಹೊಣೆಗಾರಿಕೆ
ರಾಜ್ಯದ ಇತಿಹಾಸದಲ್ಲೇ ಮೊದಲು; ರಾಜ್ಯದಾದ್ಯಂತ ಏಕಕಾಲಕ್ಕೆ “ಜನತಾ ದರ್ಶನ”!  title=
ಏಕಕಾಲಕ್ಕೆ “ಜನತಾ ದರ್ಶನ”!

ಬೆಂಗಳೂರು: ರಾಜ್ಯದಾದ್ಯಂತ ಏಕಕಾಲಕ್ಕೆ ನಡೆಯಲಿರುವ “ಜನತಾ ದರ್ಶನ”ಕ್ಕೆ ಕರುನಾಡು ನಾಳೆ ಸಾಕ್ಷಿಯಾಗಲಿದೆ. ಇದು ರಾಜ್ಯದ ಇತಿಹಾದಲ್ಲೇ ಮೊದಲು. ಹೌದು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಸಿಇಓಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾಳಜಿ ಈ ಜನತಾ ದರ್ಶನದ ಹಿಂದಿದೆ.

ಮುಖ್ಯಮಂತ್ರಿಗಳ ಸೂಚನೆ ಏನು?

ಆಡಳಿತಕ್ಕೆ ಚುರುಕು ಮುಟ್ಟಿಸಿ, ಸರ್ಕಾರಿ ಯಂತ್ರಾಂಗವನ್ನು ಕ್ರಿಯಾಶೀಲಗೊಳಿಸುವ ಪ್ರಯತ್ನವಾಗಿ ನಡೆಸಿದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯ್ತಿ ಸಿಇಓಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರು 10 ದಿನಗಳ ಹಿಂದೆ ಒಂದು ಸೂಚನೆ ನೀಡಿದ್ದರು. ‘ಜಾತಿ ಪ್ರಮಾಣಪತ್ರ, ಖಾತೆ ಬದಲಾವಣೆ, ಟ್ರಾನ್ಸ್ ಫಾರ್ಮರ್ ರಿಪೇರಿ, ವಿದ್ಯುತ್ ಕಂಬ ಅಳವಡಿಕೆಯಂತಹ ಸಣ್ಣಪುಟ್ಟ ಕೆಲಸಗಳಿಗೂ ಜನ ನನ್ನ ಬಳಿಗೆ ಬರುತ್ತಿದ್ದಾರೆ. ನಾನು ಜಿಲ್ಲೆಗಳಿಗೆ ಭೇಟಿ ನೀಡಿದಾಗ ಜನರು ಇಷ್ಟು ಸಣ್ಣಪುಟ್ಟ ಕೆಲಸಗಳಿಗೂ ನನ್ನನ್ನು ಹುಡುಕಿಕೊಂಡು ಬರುವಂತಾಗಿದೆ ಎಂದರೆ ನೀವುಗಳಿದ್ದೂ ಏನು ಪ್ರಯೋಜನವೆಂದು ಸಭೆಯಲ್ಲಿ ಪ್ರಶ್ನಿಸಿದ್ದರು. ಬಳಿಕ ಪ್ರತಿ ಜಿಲ್ಲೆ ಮತ್ತು ತಾಲೂಕುಗಳಲ್ಲೂ ಜನತಾ ದರ್ಶನ ನಡೆಸಬೇಕು ಎನ್ನುವ ಸೂಚನೆಯನ್ನೂ ನೀಡಿದ್ದರು. ಈ ಸೂಚನೆಯ ಫಲವೇ ಸೆ.25ರ ನಾಳೆ ರಾಜ್ಯದಾದ್ಯಂತ ಏಕಕಾಲಕ್ಕೆ ನಡೆಯಲಿರುವ “ಜನತಾ ದರ್ಶನ” ಕಾರ್ಯಕ್ರಮ.

ಇದನ್ನೂ ಓದಿ: ಕಾವೇರಿ ನೀರು ಬಿಟ್ರೆ ಮುಂದೆ ಕರ್ನಾಟಕ ಬಂದ್: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ

ಸ್ವರೂಪ ಏನು?

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯ್ತಿ ಸಿಇಓಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜನತಾ ದರ್ಶನ ನಡೆಸುತ್ತಾರೆ. ಎಲ್ಲಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿರುತ್ತಾರೆ. ಇವರೆಲ್ಲರ ನಡುವೆ ಸಮನ್ವಯ ಸಾಧಿಸಿ ಜನತಾ ದರ್ಶನ ಅರ್ಥಪೂರ್ಣವಾಗಿ ಮತ್ತು ಫಲಪ್ರದವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಹಿರಿಯ ಐಎಎಸ್ ಅಧಿಕಾರಿಗಳ ಮೇಲಿರುತ್ತದೆ.

ಪ್ರತಿ ಜಿಲ್ಲೆಯಲ್ಲೂ ಜನತಾದರ್ಶನ ನಡೆಯುವ, ನಡೆಸುವ ಬಗ್ಗೆ ಸಾರ್ವಜನಿಕರಿಗೆ ಈಗಾಗಲೇ ತಿಳಿವಳಿಕೆ ನೀಡಲಾಗಿದೆ. ನಿಗದಿತ ಸ್ಥಳದಲ್ಲಿ ನಿಗದಿತ ಸಮಯಕ್ಕೆ ಸರಿಯಾಗಿ ಜನತಾದರ್ಶನ ಆರಂಭವಾಗಬೇಕು ಎನ್ನುವ ಸೂಚನೆ ಸರ್ಕಾರದ ಕಡೆಯಿಂದ ಹೋಗಿದೆ. ಇಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಈ ಅಹವಾಲುಗಳಿಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸುವುದು ಪ್ರಥಮ ಆಧ್ಯತೆಯಾಗಿರುತ್ತದೆ. ತಾಂತ್ರಿಕ ಕಾರಣಗಳಿಂದ ಇದು ಸಾಧ್ಯವಾಗದಿದ್ದರೆ ಸಾರ್ವಜನಿಕರ ಅಹವಾಲುಗಳು ಸ್ಥಳದಲ್ಲೇ ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ವರ್ಗಾವಣೆಗೊಳ್ಳುತ್ತವೆ. ಎಲ್ಲದಕ್ಕೂ ಕಾಲಮಿತಿಯಲ್ಲಿ ಪರಿಹಾರ ಒದಗಿಸುವ ಮತ್ತು ಸಾರ್ವಜನಿಕರು ನೀಡಿದ ಅಹವಾಲಿನ ಸ್ಥಿತಿಗತಿಯನ್ನು ಅರ್ಜಿದಾರರಿಗೆ ಮನವರಿಕೆ ಮಾಡಿಸುವ ಜವಾಬ್ದಾರಿ ಕೂಡ ಜಿಲ್ಲಾಡಳಿತದ ಮೇಲಿರುತ್ತದೆ.

ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಸರ್ಕಾರ ಎಡವಿದೆ : ಮಾಜಿ ಸಿಎಂ ಬೊಮ್ಮಾಯಿ

ಸಾರ್ವಜನಿಕರ ಅಹವಾಲು ಎಲ್ಲಿ ದಾಖಲಾಗುತ್ತವೆ?

ಜನತಾ ದರ್ಶನದಲ್ಲಿ ಸಲ್ಲಿಕೆಯಾಗುವ ಸಾರ್ವಜನಿಕರ ಅಹವಾಲುಗಳು ಈಗಾಗಲೇ ಚಾಲ್ತಿಯಲ್ಲಿರುವ “ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್‌ಎಸ್-ಇಂಟೆಗ್ರೇಟೆಡ್ ಪಬ್ಲಿಕ್ ಗ್ರಿವಿಯೆನ್ಸ್ ರಿಡ್ರೆಸಲ್ ಸಿಸ್ಟಂ) ತಂತ್ರಾಂಶದಲ್ಲಿ ದಾಖಲಾಗುತ್ತದೆ ಮತ್ತು ಇಲ್ಲಿಂದಲೇ ಸಂಬಂಧಪಟ್ಟ ಇಲಾಖೆಯ ಟೇಬಲ್ಲಿಗೆ ಅರ್ಜಿಗಳ ವಿಲೇವಾರಿಯೂ ನಡೆಯುತ್ತದೆ. ಬಳಿಕ ಕಾಳಜಿ ವಹಿಸಿ ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಕ್ರಮವಹಿಸಬೇಕು ಎನ್ನುವ ಸೂಚನೆ ಈಗಾಗಲೇ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ರವಾನೆಯಾಗಿದೆ.

ತಾಲೂಕು ಮಟ್ಟದ ಜನತಾ ದರ್ಶನ

ನಾಳೆ ರಾಜ್ಯದಾದ್ಯಂತ ಜಿಲ್ಲಾಮಟ್ಟದ ಜನತಾ ದರ್ಶನ ಸಭೆ ನಡೆದ ಬೆನ್ನಲ್ಲೇ ಪ್ರತಿ 15 ದಿನಗಳಿಗೆ ಒಮ್ಮೆ ಜಿಲ್ಲಾಧಿಕಾರಿಗಳು ಒಂದು ತಾಲೂಕನ್ನು ಆರಿಸಿಕೊಂಡು ತಾಲೂಕು ಮಟ್ಟದ ಜನತಾ ದರ್ಶನ ಸಭೆ ನಡೆಸಬೇಕು ಎನ್ನುವ ಆದೇಶವನ್ನೂ ಈಗಾಗಲೇ ಮುಖ್ಯಮಂತ್ರಿಗಳ ಸೂಚನೆಯಂತೆ, ಅಪರ ಮುಖ್ಯ ಕಾರ್ಯದರ್ಶಿ ಆಗಿರುವ ರಜನೀಶ್ ಗೋಯಲ್ ಆದೇಶ ಹೊರಡಿಸಿದ್ದಾರೆ.

ಪರಿಣಾಮ ಸಾರ್ವಜನಿಕರು ಪದೇ ಪದೇ ಸಣ್ಣಪುಟ್ಟ ಕೆಲಸಗಳಿಗೂ ಸರ್ಕಾರಿ ಕಚೇರಿಗಳಿಗೆ, ಶಾಸಕರ, ಜಿಲ್ಲಾಮಂತ್ರಿಗಳ, ಮುಖ್ಯಮಂತ್ರಿಗಳ ಬಳಿಗೆ ಅಲೆಯುವುದು ತಪ್ಪುತ್ತದೆ. ಅರ್ಜಿದಾರರ ದೂರು ಸತ್ಯವಾಗಿದ್ದು, ಯಾವುದೇ ದುರುದ್ದೇಶದಿಂದ ಕೂಡಿರದಿದ್ದರೆ ಅಂತಹ ಅರ್ಜಿಗಳಿಗೆ ಸೂಕ್ತ ಪರಿಹಾರ ಒದಗಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಯನ್ನು ಇದಕ್ಕೆ ಹೊಣೆಗಾರರನ್ನಾಗಿಸಿ ಸರ್ಕಾರ ಕ್ರಮ ಜರುಗಿಸಲಿದೆ. ಹೀಗೆ... ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯದಾದ್ಯಂತ ಏಕಕಾಲಕ್ಕೆ ಒಂದೇ ದಿನ ಜನತಾ ದರ್ಶನ ದಾಖಲಾಗುತ್ತಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News