ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದುತಂದ ಪ್ರಧಾನಿ ಮೋದಿ

ನಾಡಪ್ರಭು ಕೆಂಪೇಗೌಡರ ನೂರಾ ಎಂಟು ಅಡಿ ಎತ್ತರದ ಪ್ರತಿಮೆ ಅನಾವರಣ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದೇ ಇರುವ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಜೆಡಿಎಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪಕ್ಷವು, ಬಿಜೆಪಿ ಸರಕಾರ ಹಾಗೂ ಆ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದೆ. ಅಲ್ಲದೆ, ಕೆಂಪೇಗೌಡರನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ರಾಜಕೀಯಕ್ಕೆ ಎಳೆದು ತಂದಿದ್ದಾರೆ ಎಂದು ಕಿಡಿಕಾರಿದೆ.

Written by - Prashobh Devanahalli | Edited by - Krishna N K | Last Updated : Nov 11, 2022, 07:23 PM IST
  • ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದುತಂದ ಪ್ರಧಾನಿ ಮೋದಿ
  • ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ ನೀಡದ ಬಿಜೆಪಿ
  • ಬಿಜೆಪಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ ಜೆಡಿಎಸ್‌
ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದುತಂದ ಪ್ರಧಾನಿ ಮೋದಿ title=

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ನೂರಾ ಎಂಟು ಅಡಿ ಎತ್ತರದ ಪ್ರತಿಮೆ ಅನಾವರಣ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದೇ ಇರುವ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಜೆಡಿಎಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪಕ್ಷವು, ಬಿಜೆಪಿ ಸರಕಾರ ಹಾಗೂ ಆ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದೆ. ಅಲ್ಲದೆ, ಕೆಂಪೇಗೌಡರನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ರಾಜಕೀಯಕ್ಕೆ ಎಳೆದು ತಂದಿದ್ದಾರೆ ಎಂದು ಕಿಡಿಕಾರಿದೆ.

ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಹೆಚ್.ಡಿ.ದೇವೇಗೌಡ ಅವರನ್ನು  ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಪಕ್ಷವು ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿ: "ಪಕ್ಷದೊಳಗೆ ಯಾರನ್ನೂ ಬೈಯ್ಯದಂತೆ ಸೂಚನೆ; ಬ್ರಾಹ್ಮಣರನ್ನ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿಸಲು ಮನವಿ"

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ್ದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ? ಎಂದು ಜೆಡಿಎಸ್‍ ಟ್ವೀಟ್ ಮೂಲಕ ಪ್ರಶ್ನೆ ಮಾಡಿದೆ. ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ.

ರಾಜ್ಯ ಬಿಜೆಪಿ ಸರಕಾರ, ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ  ಅಪಮಾನ. ಇದು ಅಕ್ಷಮ್ಯದ ಪರಮಾವಧಿ ಎಂದು ಟೀಕಿಸಿದೆ. ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ ಎಂದು ಕಿಡಿಕಾರಿದೆ.

ಇದನ್ನೂ ಓದಿ: ಪ್ರತಿ ತಿಂಗಳು ಮೋದಿ ಬರಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ ಚಳವಳಿ, ಪೊಲೀಸರಿಂದ ಬಂಧನ

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ ಎಂದು ಜೆಡಿಎಸ್ ಟೀಕಿಸಿದೆ.

ಕೆಂಪೇಗೌಡರು ಕೇಂದ್ರದ ಬಿಜೆಪಿ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ಟ್ವೀಟ್ ಮೂಲಕ ಜೆಡಿಎಸ್‍ ಆಕ್ರೋಶ ವ್ಯಕ್ತಪಡಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News