ಬೆಂಗಳೂರು: ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರಾಭವಗೊಂಡು, ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚುನಾವಣೆ ನಂತರ ಇದೆ ಮೊದಲ ಬಾರಿಗೆ ಬಾದಾಮಿಗೆ ಭೇಟಿ ನೀಡಿ ಅಲ್ಲಿನ ಜನತೆಗೆ ಕೃತಜ್ಞತೆ ಸಲ್ಲಿಸಲು ಮುಂದಾಗಿದ್ದಾರೆ.
ಈ ನಿಟ್ಟಿನಲ್ಲಿ ಇಂದಿನಿಂದ ಅಂದರೆ ಜೂ.7 ರಿಂದ ಜೂ.11ರವರೆಗೆ ಐದು ದಿನಗಳ ಕಾಲ ಬಾದಾಮಿ ಪ್ರವಾಸ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅವರು, ಇಂದು ಸಂಜೆ ಐದು ಗಂಟೆ ಸುಮಾರಿಗೆ ಕಾಳಿದಾಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಅವರು ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಅಂಜುಮನ್ ಶಿಕ್ಷಣ ಸಂಸ್ಥೆಯಲ್ಲಿ ಇಫ್ತಾರ್ ಕೂಟದಲ್ಲಿ ಭಾಗವಹಿಸಲಿದ್ದಾರೆ. ತಮ್ಮ ಐದು ದಿನಗಳ ಪ್ರವಾಸದಲ್ಲಿ 45 ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ತಮ್ಮನ್ನು ಗೆಲ್ಲಿಸಿದ ಮತದಾರರು ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಲಿದ್ದಾರೆ. ಅಲ್ಲದೆ, ಇದೀಗ ತಮ್ಮ ಬಾದಾಮಿ ಕ್ಷೇತ್ರದ ಅಭಿವೃದ್ಧಿಗಾಗಿ ತಮ್ಮ ಬಜೆಟ್ನಲ್ಲಿ ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರ, ಪಟ್ಟದಕಲ್ಲು ಪ್ಲಾಜಾ, ಪ್ರವಾಸಿ ತಾಣಗಳಲ್ಲಿ ಮೂಲ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಮೊದಲಾದ ಯೋಜನೆಗಳನ್ನು ಘೋಷಿಸಿದ್ದರು. ಇದೀಗ ಆ ಎಲ್ಲಾ ಯೋಜನೆಗಳನ್ನು, ಘೋಶನೆಗಲ್ನ್ನು ಕಾರ್ಯರೂಪಕ್ಕೆ ತರಲು ಸಿದ್ದರಾಮಯ್ಯ ಅವರು ತಯಾರಿ ನಡೆಸಿದ್ದು, ಬಾದಾಮಿಯಲ್ಲಿಯೇ ಒಂದು ಮನೆ ಮಾಡಲೂ ನಿರ್ಧರಿಸಿದ್ದಾರೆ.
ಮೇ.12ರಂದು ರಾಜ್ಯ ವಿಧಾಸಭೆಗೆ ನಡೆದ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ನಾಲ್ಕು ಸಾವಿರ ಮತಗಳ ಅಂತರದಿಂದ ಬಾದಾಮಿಯಲ್ಲಿ ಗೆಲುವು ಸಾಧಿಸಿದ್ದರು. ಆದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರ ವಿರುದ್ಧ 30 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲನುಭವಿಸಿದ್ದರು.