ಜ.7ರಂದು ಬೆಂಗಳೂರಿಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮನ

ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಅವರು ಭಾಗವಹಿಸಲಿದ್ದಾರೆ. 

Updated: Jan 3, 2018 , 04:41 PM IST
ಜ.7ರಂದು ಬೆಂಗಳೂರಿಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮನ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಂತ ಕೈಗೊಂಡಿರುವ ಪರಿವರ್ತನಾ ಯಾತ್ರೆಗೆ ಮತ್ತಷ್ಟು ಶಕ್ತಿ ತುಂಬಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇದೇ ಜನವರಿ 7 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. 

ಅಂದು ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಅವರು ಭಾಗವಹಿಸಲಿದ್ದಾರೆ. 

ಗುಜರಾತ್‌ನಲ್ಲಿ ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಚಾರ ನಡೆಸಿದ ಕಡೆಗಳಲ್ಲಿ ಬಿಜೆಪಿಗೆ ಅನುಕೂಲವಾಗಿದೆ ಎನ್ನಲಾಗಿದೆ. ಅದರಂತೆ ರಾಜ್ಯದಲ್ಲೂ ಅವರಿಂದ ಪ್ರಚಾರ ನಡೆಸಲು ಕೇಂದ್ರ ನಾಯಕರು ಚಿಂತನೆ ನಡೆಸಿದ ಹಿನ್ನೆಲೆಯಲ್ಲಿ 2ನೇ ಬಾರಿ ಕರ್ನಾಟಕಕ್ಕೆ ಯೋಗಿ ಆಗಮಿಸಲಿದ್ದಾರೆ. 

ಕಳೆದ ಡಿ.21 ರಂದು ಹುಬ್ಬಳ್ಳಿಯಲ್ಲಿ ನಡೆದಿದ್ದ ಪರಿವರ್ತನಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಯೋಗಿ ಆದಿತ್ಯನಾಥ್ ರಾಜ್ಯ ಸರ್ಕಾರದ ವಿರುದ್ಧ ಟೀಕಿಸಿ ಒಂದು ವಾರದ ಮಟ್ಟಿಗೆ ಕಾಂಗ್ರೆಸ್ ನಾಯಕರು ಉತ್ತರ ಕೊಡುವಂತೆ ಮಾಡಿದ್ದರು.  

ಇದೀಗ ಮತ್ತೆ ಎರಡನೇ ಬಾರಿಗೆ ರಾಜ್ಯಕ್ಕೆ ಪರಿವರ್ತನಾ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ಇವರ ಆಗಮನ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಲಿದೆ.