ಧರ್ಮಸ್ಥಳದಲ್ಲಿ ನೀರಿನ ಅಭಾವ: ವೀರೇಂದ್ರ ಹೆಗ್ಗಡೆಯವರ ಜೊತೆ ಮುಖ್ಯ ಕಾರ್ಯದರ್ಶಿ ಚರ್ಚೆ

ಇಂದು ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು.

Last Updated : May 20, 2019, 05:32 PM IST
ಧರ್ಮಸ್ಥಳದಲ್ಲಿ ನೀರಿನ ಅಭಾವ: ವೀರೇಂದ್ರ ಹೆಗ್ಗಡೆಯವರ ಜೊತೆ ಮುಖ್ಯ ಕಾರ್ಯದರ್ಶಿ ಚರ್ಚೆ  title=
Pic Courtesy: Zeekannada.zee5.com

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರವಾಗಿ  ಪರಿಗಣಿಸಿದ್ದು, ಅವರ ಸಲಹೆಯಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಕಳಕಳಿಗೆ ಕೃತಜ್ಞತೆ ವ್ಯಕ್ತಪಡಿಸಿದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಇನ್ನೊಂದು ಚೆಕ್‍ಡ್ಯಾಂ ನಿರ್ಮಾಣದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಇಂದು ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಈ ತಿಂಗಳಿನಲ್ಲಿ ಬೇಸಿಗೆಯ ಬಿಸಿಲಿನ ತೀವ್ರೆಯಿಂದಾಗಿ ದೇಶದಾದ್ಯಂತ ನೀರಿನ ಅಭಾವವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಮ್ಮ ದಸ್ಖಿನ ಕನ್ನಡ ಜಿಲ್ಲೆಯಲ್ಲಿಯೂ ನೀರಿಗಾಗಿ ಜನರು ತುಂಬಾ ಕಷ್ಟಪಡುತ್ತಿದ್ದಾರೆ. ಈಗಾಗಲೇ ಮಾಧ್ಯಮಗಳಲ್ಲಿ ಪ್ರಕಟವಾದಂತೆ ರೇಶನ್ ಮುಖಾಂತರ ನೀರನ್ನು ಜಿಲ್ಲಾಡಳಿತವು ವಿತರಣೆ ಮಾಡುತ್ತಿದ್ದು, ವಾರಕ್ಕೆ 2 ರಿಂದ 3 ದಿನ ಮಾತ್ರ ಜನರಿಗೆ ನೀರು ದೊರಕುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೂಡ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತೀವ್ರ ತರದಲ್ಲಿ ಕಡಿಮೆಯಾಗುತ್ತಿದೆ.

ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳ ಉಪಯೋಗಕ್ಕೆ ಅಧಿಕ ಪ್ರಮಾಣದ ನೀರು ಬೇಕಾಗುತ್ತದೆ. ಆದುದರಿಂದ ಭಕ್ತಾದಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲ ದಿನಗಳ ಕಾಲ ಮುಂದೂಡಿ ಸಹಕರಿಸಿ ಎಂದು ಎರಡು ದಿನಗಳ ಹಿಂದೆಯಷ್ಟೇ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮನವಿ ಮಾಡಿದ್ದರು.


 

Trending News