ಕೋಲಾರ: ಮೇ 15 ರಂದು ಮಧ್ಯಾಹ್ನ 2 ಗಂಟೆಗೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಭವಿಷ್ಯ ನುಡಿದಿದ್ದಾರೆ. 


COMMERCIAL BREAK
SCROLL TO CONTINUE READING

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಅಮಿತ್ ಷಾ, ಇಂದು ಕೋಲಾರ ಜಿಲ್ಲೆಯ ಕೆಜಿಎಫ್'ನಲ್ಲಿ ಏರ್ಪಡಿಸಿದ್ದ ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಜಯಶಾಲಿಯಾಗಲಿದೆ. ರಾಜ್ಯದಲ್ಲಿ ಎಲ್ಲೇ ಹೋದರೂ ಅಪಾರ ಬೆಂಬಲ ದೊರೆಯುತ್ತಿದೆ. ಮೇ 12ರಂದು ಮತದಾನ ನಡೆಯಲಿದ್ದು, ಇದರ ಪ್ರತಿಫಲವನ್ನು ಮೇ.13ರಂದು ಕಾಣುತ್ತೇವೆ. ಮೇ 15ರಂದು ಫಲಿತಾಂಶ ಪ್ರಕಟವಾಗಲಿದ್ದು ಅಂದು ಮಧ್ಯಾಹ್ನ 2 ಗಂಟೆಗೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಅಮಿತ್ ಷಾ ವಿಶ್ವಾಸ ವ್ಯಕ್ತಪಡಿಸಿದರು. 


ಮುಂದುವರೆದು, ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರ. ಇದರ ಪ್ರತಿಫಲವನ್ನು ಮೇ 15ರಂದು ಸಿದ್ದರಾಮಯ್ಯ ಕಾಣಲಿದ್ದಾರೆ. ಬಾದಾಮಿ ಮತ್ತು ಚಾಮುಂಡೇಶ್ವರಿ ಎರಡೂ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಸೋಲುವುದು ಖಚಿತ ಎಂದು ಅಮಿತ್ ಷಾ ಹೇಳಿದ್ದಾರೆ.


ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಭಾನುವಾರವಷ್ಟೇ ತಾವು ಮೇ 17 ಅಥವಾ 18ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಭವಿಷ್ಯ ನುಡಿದಿದ್ದರು. ಅಲ್ಲದೆ, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಿ, ಮೂರರಿಂದ ನಾಲ್ಕು ಲಕ್ಷ ಜನರನ್ನು ಸೇರಿಸಿ ಅವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಇಂದು ಅಮಿತ್ ಷಾ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಿದ್ದಾರೆ.


ಚುನಾವಣಾ ಫಲಿತಾಂಶ ಪ್ರಕಟವಾಗುವುದಕ್ಕೆ ಮುನ್ನವೇ ಬಿಜೆಪಿ ನಾಯಕರು ಈ ರೀತಿ ರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.