ರೈತರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ
ರಾಜ್ಯಪಾಲ ವಜೂಭಾಯ್ ವಾಲಾ ಬಿ.ಎಸ್. ಯಡಿಯೂರಪ್ಪನವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬಿ.ಎಸ್. ಯಡಿಯೂರಪ್ಪ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾದ ಬಿ.ಎಸ್. ಯಡಿಯೂರಪ್ಪ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ರಾಜಭವನದ ಗಾಜಿನ ಮನೆಯಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಬಿಳಿ ವಸ್ತ್ರ ಹಾಗೂ ರೈತರ ಸಂಕೇತ ಸೂಚಿಸುವ ಹಸಿರು ಶಾಲು ಹೊದ್ದು ಯಡಿಯೂರಪ್ಪ ಅವರು ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮೂರನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪನವರಿಗೆ ರಾಜ್ಯಪಾಲ ವಾಜುಭಾಯಿ ವಾಲಾ ಪ್ರತಿಜ್ಞಾ ವಿಧಿ ಬೋಧಿಸಿದರು.
ನೂತನ ಮುಖ್ಯಮಂತ್ರಿಗೆ ರಾಜ್ಯಪಾಲ ವಜುಬಾಯ್ ವಾಲಾ ಹೂಗುಚ್ಛ ನೀಡಿ ಅಭಿನಂದಿಸಿದರು.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ವಿಜಯದ ಸಂಕೇತದೊಂದಿಗೆ ಬಿ.ಎಸ್.ಯಡಿಯೂರಪ್ಪ ಗೆಲುವಿನ ನಗೆ ಬೀರಿದರು.