ಬಹುಮತ ಇಲ್ಲದೆ ಸರ್ಕಾರ ರಚನೆ ವಿವೇಚನಾರಹಿತ : ರಾಹುಲ್ ಗಾಂಧಿ
ಬಹುಮತ ಇಲ್ಲದಿದ್ದರೂ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲು ಹೊರಟಿರುವ ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬಹುಮತ ಇಲ್ಲದಿದ್ದರೂ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲು ಹೊರಟಿರುವ ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿಜೆಪಿಗೆ ಬಹುಮತ ಇಲ್ಲದಿದ್ದರೂ ಸರ್ಕಾರ ರಚನೆ ಮಾಡುತ್ತೇವೆ ಎನ್ನುವುದು ವಿವೇಚನಾರಹಿತ ಒತ್ತಾಯ. ಇದು ಸಂವಿಧಾನವನ್ನು ಅಣಕಿಸಿದಂತಿದೆ. ಒಂದೆಡೆ ಇಂದು ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ವಿಜಯೋತ್ಸವ ಆಚರಿಸುತ್ತಿದ್ದರೆ, ಭಾರತವು ಪ್ರಜಾಪ್ರಭುತ್ವದ ಸೋಲನ್ನು ಕಂಡು ಮರುಗಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆಯ 224 ಸ್ಥಾನಗಳ ಪೈಕಿ ಮೇ 12 ರಂದು 222 ಸ್ಥಾನಗಳಿಗೆ ಚುನಾವಣೆ ನಡೆದು, ಮೇ 15ರಂದು ಪ್ರಕಟವಾದ ಫಲಿತಾಂಶದ ಪ್ರಕಾರ ಬಿಜೆಪಿ 104, ಕಾಂಗ್ರೆಸ್ 78 ಮತ್ತು ಜೆಡಿಎಸ್ 38 ಮತ್ತು ಇತರರು 2 ಸ್ಥಾನಗಳನ್ನು ಗಳಿಸಿದ್ದರು. ಈ ಮೂಲಕ ಯಾವ ಪಕ್ಷವೂ ಬಹುಮತ ಪಡೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹೊಂದಿ ಸರ್ಕಾರ ರಚನೆಗೆ ಪತ್ರ ಸಲ್ಲಿಸಿದ್ದವು. ಆದರೆ 104 ಸ್ಥಾನಗಳನ್ನು ಪಡೆದಿರುವ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ತಮಗೇ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಅವರಿಗೆ ಬುಧವಾರ ಪತ್ರ ಸಲ್ಲಿಸಿದ್ದರು. ಅಂತಿಮವಾಗಿ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚನೆ ಆಹ್ವಾನ ನೀಡಿದ ಹಿನ್ನೆಲೆಯಲ್ಲಿ ಗುರುವಾರ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ, ಬಹುಮತ ಸಾಬೀತುಪಡಿಸಲು ಬಿಜೆಪಿಗೆ 15ದಿನಗಳ ಗಡುವು ನೀಡಲಾಗಿದೆ.