ಜೆಡಿಎಸ್-ಕಾಂಗ್ರೆಸ್ ಮೈತ್ರಿಗೆ ಕಸರತ್ತು; ಕುಮಾರಸ್ವಾಮಿಗೆ ಸಿಎಂ ಹುದ್ದೆ ಆಫರ್
ಕಾಂಗ್ರೆಸ್ ಪಕ್ಷ ಜೆಡಿಎಸ್ ಜೊತೆ ಮೈತ್ರಿ ಹೊಂದಲು ಬೆಂಬಲ ವ್ಯಕ್ತಪಡಿಸಿದ್ದು, ಜೆಡಿಎಸ್ ರಾಜ್ಯಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡುವುದಾಗಿಯೂ ಕಾಂಗ್ರೆಸ್ ಹೇಳಿದೆ.
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷವೂ ಬಹುಮತ ಪಡೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ ಜೊತೆ ಮೈತ್ರಿ ಹೊಂದಲು ಬೆಂಬಲ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲ, ಜೆಡಿಎಸ್ ರಾಜ್ಯಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡುವುದಾಗಿಯೂ ಕಾಂಗ್ರೆಸ್ ಹೇಳಿದೆ.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದನ್ನು ತಡೆಯಬೇಕೆಂದು ದಿಟ್ಟ ನಿರ್ಧಾರ ಕೈಗೊಂಡಿರುವ ಜಾತಿವಾದಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂದು ಕಾಂಗ್ರೆಸ್ ಜಾತ್ಯಾತೀತ ತತ್ವ ಅನುಸರಿಸುತ್ತಿರುವ ಜೆಡಿಎಸ್ ಪಕ್ಷಕ್ಕೆ ಬೆಂಬಲಿಸುವುದಾಗಿ ಹೇಳಿದೆ. ಈಗಾಗಲೇ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ದೂರವಾಣಿ ಮೂಲಕ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಆಗಿ ಆಯ್ಕೆ ಮಾಡಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಅಲ್ಲದೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ಸಿದ್ಧಾಂತ ಒಂದೇ ಆಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಯಾವುದೇ ಅಭ್ಯಂತರ ಇಲ್ಲ ಎದ್ನು ದೇವೇಗೌಡರು ಹೇಳಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈ ಸಂಬಂಧ ಇಂದು ಸಂಜೆ ಜೆಡಿಎಸ್ ಮತ್ತು ಕಾಂಗ್ರೆಸ್ ಎರಡು ಪಕ್ಷಗಳ ನಿಯೋಗ ಇಂದು ಸಂಜೆ ರಾಜ್ಯಪಾಲ ವಜೂಬಾಯಿ ವಾಲಾ ಅವರನ್ನು ಭೇಟಿ ಆಗಲಿದೆ ಎಂದು ಕಾಂಗ್ರೆಸ್ ವಕ್ತಾರ ಟಿ.ಎಸ್.ವೇಣುಗೋಪಾಲ್ ಹೇಳಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ, ಮೊದಲಿನಿಂದಲೂ ಜೆಡಿಎಸ್ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಹೇಳಿದೆ. ಅಲ್ಲದೆ, ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂಬುದು ಜೆಡಿಎಸ್ ನಿಲುವು. ಈ ಹಿನ್ನೆಲಯಲ್ಲಿ ಕಾಂಗ್ರೆಸ್ ನೀಡಿರುವ ಬೆಂಬಲವನ್ನು ಒಪ್ಪಿದ್ದೇವೆ. ಇಂದು ಸಂಜೆ 5.30ಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ ಎರಡೂ ಪಕ್ಷದ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ.
ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಚುನಾವಣಾ ಫಲಿತಾಂಶ ಅಧಿಕೃತವಾಗಿ ಘೋಷಣೆಯಾಗುವವರೆಗೂ ಯಾವುದೇ ನಿರ್ದರ ತೆಗೆದುಕೊಳ್ಳುವುದಿಲ್ಲ. ಜನತೆ ಆಶೀರ್ವಾದ ನಮ್ಮ ಮೇಲಿದೆ. ಸರ್ಕಾರ ರಚಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಹಾಗಾಗಿ ಸರ್ಕಾರ ರಚನೆಗೆ ಬಿಜೆಪಿಗೆ ಹೆಚ್ಚೂ ಕಡಿಮೆ 8ರಿಂದ 10 ಸ್ಥಾನಗಳು ಕಡಿಮೆಯಾಗುವ ಸಾಧ್ಯತೆಗಳಿರುವುದರಿಂದ ಹೆಚ್ಚು ಸ್ಥಾನ ಗಳಿಸಿದರೂ ಸರ್ಕಾರ ರಚನೆ ಮಾಡಲಾಗದ ಪರಿಸ್ಥಿತಿ ಎದುರಾಗಿದೆ.
ಆದರೆ, ಅತಿ ಹೆಚ್ಚು ಸ್ಥಾನ ಗಳಿಸಿ ಸರ್ಕಾರ ರಚಿಸಲು ಸಾದ್ಯವಾಗಲಿಲ್ಲವಲ್ಲ ಎಂದು ಸುಮ್ಮನೆ ಕೂರುವ ಜಾಯಮಾನವಂತೂ ಬಿಜೆಪಿಯದ್ದಲ್ಲ. ಈ ಹಿಂದೆಯೂ ಕೂಡ ಅಧಿಕಾರಕ್ಕೋಸ್ಕರ ಆಪರೇಶನ್ ಕಮಲದ ಮೂಲಕ ಜೆಡಿಎಸ್ ಶಾಸಕರನ್ನು ಸೆಳೆದಿದ್ದ ಯಡಿಯೂರಪ್ಪ ಅವರು, ಜೆಡಿಎಸ್ ಗೆ ಅಧಿಕಾರ ಕೊಟ್ಟು, ಕುಮಾರಸ್ವಾಮಿಯವರಿಗೆ ಮುಖ್ಯಮಂತ್ರಿಗೆ ಪಟ್ಟು ನೀಡಿದರೂ ಪರವಾಗಿಲ್ಲ, ಕಾಂಗ್ರೆಸ್ಸಿಗೆ ಮಾತ್ರ ಅಧಿಕಾರ ನೀಡಬಾರದು, ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಿಸಬೇಕೆಂಬ ನಿರ್ಣಯಕ್ಕೆ ಬಂದರೂ ಅಚ್ಚರಿಯಿಲ್ಲ.