ಅತ್ತ ಯಡಿಯೂರಪ್ಪ ಪ್ರಮಾಣವಚನ, ಇತ್ತ ಕಾಂಗ್ರೆಸ್-ಜೆಡಿಎಸ್ ನಾಯಕರ ಪ್ರತಿಭಟನೆ
ಕರ್ನಾಟಕದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದನ್ನು ವಿರೋಧಿಸಿ ಬೆಂಗಳೂರಿನ ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ನಾಯಕರ ಪ್ರತಿಭಟನೆ.
ಬೆಂಗಳೂರು: ಹಲವು ವಿರೋಧಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಅತ್ತ ಬಿಎಸ್ವೈ ಪ್ರಮಾಣವಚನ ಸ್ವೀಕರಿಸಿದರೆ, ಇತ್ತ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದನ್ನು ವಿರೋಧಿಸಿ ಬೆಂಗಳೂರಿನ ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ನಾಯಕ ಗುಲಾಂ ನಭಿ ಆಜಾದ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ನಾಯಕರಿಗೆ ಹಲವು ಶಾಸಕರು ಹಾಗೂ ಕಾರ್ಯಕರ್ತರು ಸಾಥ್ ನೀಡಿದ್ದು, ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜ್ಯಪಾಲರ ಈ ಕ್ರಮ ಅಸಂವಿಧಾನಿಕ. ರಾಜ್ಯ ಮತ್ತು ದೇಶದ ಇತಿಹಾಸದಲ್ಲೇ ಎಂದೂ ಕೂಡ ಬಹುಮತ ಸಾಬೀತಿಗೆ 15 ದಿನ ಅವಕಾಶ ನೀಡಿಲ್ಲ. ಗೋವಾ, ಮಣಿಪುರಗಳಲ್ಲಿ ಬಹುಮತ ಸಾಬಿತುಮಾಡಿದವರಿಗೆ ಸರ್ಕಾರ ರಚಿಸಲು ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ರಾಜ್ಯಪಾಲರಿಗೆ ಮನವಿ ಮಾಡಿದರೂ ಅವಕಾಶ ನೀಡಿಲ್ಲ. ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಲಾಗಿದೆ. ಈ ಕ್ರಮವನ್ನು ಖಂಡಿಸಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಬಗ್ಗೆ ಕಾಂಗ್ರೆಸ್, ಜೆಡಿಎಸ್ ನಾಯಕರು ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.