ದಲಿತ ಸಿಎಂ ವಿಚಾರದಲ್ಲಿ ಭಿನ್ನಾಭಿಪ್ರಾಯ ಮಾಧ್ಯಮಗಳ ಸೃಷ್ಟಿ: ಖರ್ಗೆ
ದಲಿತ ಮುಖ್ಯಮಂತ್ರಿ ವಿಚಾರವಾಗಿ ಪಕ್ಷದ ನಾಯಕರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲಾ ಮಾಧ್ಯಮಗಳ ಸೃಷ್ಟಿ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ನವದೆಹಲಿ : ದಲಿತ ಮುಖ್ಯಮಂತ್ರಿ ವಿಚಾರವಾಗಿ ಪಕ್ಷದ ನಾಯಕರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲಾ ಮಾಧ್ಯಮಗಳ ಸೃಷ್ಟಿ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಹಾಗೂ ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಇಂದಿಲ್ಲಿ ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ದಲಿತ ಮುಖ್ಯಮಂತ್ರಿ ವಿಚಾರವಾಗಿ ಭಿನ್ನಾಭಿಪ್ರಾಯ ಮೂಡಿಸುವ ಕೆಲಸವನ್ನು ಮಾಧ್ಯಮಗಳು ಮಾಡುತ್ತಿವೆ. ಕೇವಲ 12 ಗಂಟೆಗಳಷ್ಟೇ ಉಳಿದಿದೆ. ನಾಳೆ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳಲಿದೆ. ನಂತರ ಕಾಂಗ್ರೆಸ್ ಹೈಕಮ್ಯಾಂಡ್ ಈ ಬಗ್ಗೆ ನಿರ್ಧರಿಸಲಿದ್ದು, ಅದಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ ಎಂದು ಹೇಳಿದ್ದಾರೆ.
ಭಾನುವಾರವಷ್ಟೇ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿದ್ದರಾಮಯ್ಯ ಅವರು, ಪಕ್ಷ ಹೈಕಮ್ಯಾಂಡ್ ನಿರ್ಧರಿಸಿದರೆ ದಲಿತ ಸಿಎಂಗಾಗಿ ತಮ್ಮ ಸ್ಥಾನ ಬಿಟ್ಟುಕೊಡಲು ಸಿದ್ಧ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಮಲ್ಲಿಕಾರ್ಜುನ ಖರ್ಗೆ, ದಲಿತ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸ್ಥಾನ ನೀಡುವುದಾದರೆ ತಮಗೆ ಆ ಸ್ಥಾನ ಬೇಡ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಖಡಕ್ ಆಗಿ ಪ್ರತಿಕ್ರಿಯಿಸಿದ್ದರು.