ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೊತೆಗೆ ಯಾರೆಲ್ಲಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಂಪುಟ ವಿಸ್ತರಣೆ ಸಂಬಂಧ ಮಂಗಳವಾರ ಸಂಜೆ  ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ನಡೆಸಿದ ಸಭೆಯಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರಲಾಗಿದ್ದು, ಬುಧವಾರ ಎಚ್.ಡಿ. ಕುಮಾರಸ್ವಾಮಿ ಜೊತೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 


COMMERCIAL BREAK
SCROLL TO CONTINUE READING

ಡಾ.ಜಿ. ಪರಮೇಶ್ವರ್‌ ಉಪ ಮುಖ್ಯಮಂತ್ರಿ ಸ್ಥಾನವನ್ನು ಪಡೆದರೆ, ಮತ್ತೊಬ್ಬ ಕಾಂಗ್ರೆಸ್‌ ಮುಖಂಡ ರಮೇಶ್‌‌ ಕುಮಾರ್‌ ಸ್ಪೀಕರ್‌ ಆಗಿ ಆಯ್ಕೆ ಆಗಿದ್ದಾರೆ. ಇದನ್ನು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದು, ಬಹುಮತ ಸಾಬೀತುಪಡಿಸಿದ ಬಳಿಕ ಖಾತೆಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದಿದ್ದಾರೆ. 


ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಅವರ ಹೆಸರನ್ನು ಆಯ್ಕೆ ಮಾಡಿದ್ದಾರೆ. 



ರಾಜ್ಯದ ಜನತೆಗೆ ಸೇವೆ ಸಲ್ಲಿಸಲು ನೀಡುತ್ತಿರುವ ಈ ಅವಕಾಶಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ಶ್ರೀ ರಾಹುಲ್ ಗಾಂಧಿಯವರಿಗೆ, ಶ್ರೀಮತಿ ಸೋನಿಯಾ ಗಾಂಧಿಯವರಿಗೆ, ಶ್ರೀ ಗುಲಾಂ ನಬಿ ಆಜಾದ್ ಅವರಿಗೆ, ಶ್ರೀ ಅಶೋಕ್ ಗೆಹ್ಲೋಟ್ ಅವರಿಗೆ, ಶ್ರೀ ಕೆ.ಸಿ. ವೇಣುಗೋಪಾಲ್‌ ಅವರಿಗೆ ಮತ್ತು ನನ್ನ ಕುಟುಂಬವೇ ಆಗಿರುವ ಕೆಪಿಸಿಸಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು ಎಂದು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಡಾ. ಜಿ. ಪರಮೇಶ್ವರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.