ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಯ್ಕೆ
ಇವಿಎಂ ಹಾಗೂ ವಿವಿಪ್ಯಾಟ್ ನಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಫಲಿತಾಂಶಕ್ಕೆ ಚುನಾವಣಾ ಆಯೋಗ ತಡೆ ನೀಡಿತ್ತು.
ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಮತ ಎಣಿಕೆ ಸಂದರ್ಭದಲ್ಲಿ ಉಂಟಾಗಿದ್ದ ಇವಿಎಂ ಗೊಂದಲ ಪ್ರಕರಣಕ್ಕೆ ತೆರೆಬಿದ್ದಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಫಲಿತಾಂಶ ಮಧ್ಯರಾತ್ರಿ ಪ್ರಕಟಗೊಂಡಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಯ್ಕೆಯಾಗಿದ್ದಾರೆ.
ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಒಟ್ಟು 75,591 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಹೇಶ ನಾಲವಾಡ 54,321 ಮತಗಳನ್ನು ಪಡೆದಿದ್ದಾರೆ. ಜಗದೀಶ್ ಶೆಟ್ಟರ್ 21,270 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸತತ ಆರನೇ ಬಾರಿಗೆ ವಿಜಯದ ಮಾಲೆ ಧರಿಸಿದ್ದಾರೆ.
ನಿಮ್ಮ ಕ್ಷೇತ್ರದಲ್ಲಿ ಗೆದ್ದವರು ಯಾರೆಂದು ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ
ಫಲಿತಾಂಶಕ್ಕೆ ಚುನಾವಣಾ ಆಯೋಗ ತಡೆ ನೀಡಿದ್ದು ಏಕೆ?
ಇವಿಎಂ ಚಲಾವಣೆಯಾಗಿದ್ದಕ್ಕಿಂತ 207 ಹೆಚ್ಚು ಮತವನ್ನು ತೋರಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹೇಶ್ ನಾಲವಾಡ ಅವರು ಫಲಿತಾಂಶವನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದರು. ಇವಿಎಂ ಹಾಗೂ ವಿವಿಪ್ಯಾಟ್ ನಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಫಲಿತಾಂಶಕ್ಕೆ ಚುನಾವಣಾ ಆಯೋಗ ತಡೆ ನೀಡಿತ್ತು.