ಬೆಂಗಳೂರು : ಬಿಜೆಪಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. 


COMMERCIAL BREAK
SCROLL TO CONTINUE READING

ನಂತರ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು, ಬೆಳಮಗಿ ಅವರ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಲ್ಬುರ್ಗಿ ಗ್ರಾಮಾಂತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ರೇವು ನಾಯಕ್ ಬೆಳಮಗಿ ಸ್ಪರ್ಧಿಸಲಿದ್ದಾರೆ ಎಂದ ದೇವೇಗೌಡರು ಬೆಳಮಗಿ ಅವರಿಗೆ ಬಿ ಫಾರಂ ನೀಡಿ ಶುಭ ಹಾರೈಸಿದರು.


ಈ ಕ್ಷೇತ್ರವನ್ನು ಚುನಾವಣಾ ಪೂರ್ವ ಮೈತ್ರಿ ಒಪ್ಪಂದದಂತೆ ಬಿಎಸ್ಪಿಗೆ ಬಿಟ್ಟುಕೊಡಲಾಗಿತ್ತು. ಆದರೆ ಬೆಳಮಗಿ ಅವರಿಗಾಗಿ ಬಿಎಸ್ಪಿ(BSP) ನಾಯಕರು ಆ ಕ್ಷೇತ್ರವನ್ನು ಬಿಟ್ಟುಕೊಡಲು ಒಪ್ಪಿಕೊಂಡಿದ್ದಾರೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ದೇವೇಗೌಡರು ಸ್ಪಷ್ಟಪಡಿಸಿದರು. 


ಇನ್ನು, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಬಹಳ ಸಂತೋಷ ತಂದಿದೆ ಎಂದು ರೇವು ನಾಯಕ್ ಬೆಳಮಗಿ ಹೇಳಿದರು. ಬಿಜೆಪಿಯಲ್ಲಿ ಕಲಬುರ್ಗಿಯಿಂದ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಆ ಮಾತಿಗೆ ತಪ್ಪಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ ಅವರು ತಮ್ಮ ಸ್ವ ಇಚ್ಛೆಯಿಂದಲೇ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಪಕ್ಷದ ಗೆಲುವಿಗಾಗಿ, ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದರು.