ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಗೆ ಕಾಂಗ್ರೆಸ್-ಜೆಡಿಎಸ್ ನಾಯಕರ ಕಸರತ್ತು ಮುಂದುವರೆದಿದ್ದು, 117 ಶಾಸಕರು ಸಹಿ ಮಾಡಿರುವ ಪತ್ರ ಮತ್ತು ಕಾಂಗ್ರೆಸ್-ಜೆಡಿಎಸ್ ಶಾಸಕಾಂಗ ಪಕ್ಷದಲ್ಲಿ ತೆಗೆದುಕೊಂಡ ನಿರ್ಣಯವನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಸಲ್ಲಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಇಂದು ಕಾಂಗ್ರೆಸ್-ಜೆಡಿಎಸ್ ನಾಯಕರ ರಾಜ್ಯಪಾಲರನ್ನು ಭೇಟಿ ಮಾಡಿ ಪಟ್ಟಿ ಸಲ್ಲಿಸಿದ ಬಳಿಕ ರಾಜಭವನದ ಮುಂದೆ ಪತ್ರಿಕಾಗೋಷ್ಠಿ ನಡೆಸಿದ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, "ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಹೊಸದಾಗಿ ಆಯ್ಕೆಯಾಗಿರುವ ಶಾಸಕರ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿ, ಎರಡೂ ಪಕ್ಷಗಳ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಪ್ರತಿಯನ್ನು ಪರಮೇಶ್ವರ್ ಮತ್ತು ನಮ್ಮ ಪಕ್ಷದ ವತಿಯಿಂದ ಜಂಟಿಯಾಗಿ ರಾಜ್ಯಪಾಲರಿಗೆ ಸಲ್ಲಿಸಿದ್ದೇವೆ. ಇಬ್ಬರೂ ಚುನಾವಣಾ ನಂತರದ ಮೈತ್ರಿ ಮಾಡಿಕೊಂಡಿರುವುದನ್ನು ಮತ್ತು ಸ್ಥಿರ ಸರ್ಕಾರ ರಚಿಸಲು 117 ಶಾಸಕರ ಬೆಂಬಲ ಇರುವ ಸಹಿಯ ಪಟ್ಟಿಯನ್ನು ರಾಜ್ಯಪಾಲರಿಗೆ ನೀಡಿದ್ದೇವೆ" ಎಂದು ಕುಮಾರಸ್ವಾಮಿ ಹೇಳಿದರು.



ರಾಜ್ಯಪಾಲರ ಬಳಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದು, ಮಿಜೋರಾಂ, ನಾಗಾಲ್ಯಾಂಡ್​, ತ್ರಿಪುರ ಹಾಗೂ ಗೋವಾ ರಾಜ್ಯಗಳಲ್ಲಾದ ತೀರ್ಮಾನವನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಅದರಂತೆ ಇಲ್ಲೂ ತೀರ್ಮಾನ ಕೈಗೊಳ್ಳುವಂತೆ ಮನವಿ ಮಾಡಿದ್ದು, ನಮ್ಮ ಮನವಿಯನ್ನು ರಾಜ್ಯಪಾಲರು ಒಪ್ಪಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಆದೇಶವನ್ನು ಪರಿಶೀಲಿಸಿ ಸಂವಿಧಾನದಡಿ ನಿರ್ಧಾರ ತೆಗೆದುಕೊಳ್ಳುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.


ಈ ಸಂದರ್ಭದಲ್ಲಿ ಕೆಪಿಸಿಸ್ ಅಧ್ಯಕ್ಷ ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ಎಸ್.ಆರ್.ಪಾಟಿಲ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಹಾಜರಿದ್ದರು.