ಹುಬ್ಬಳ್ಳಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ಸ್ಟಾರ್ ಪ್ರಚಾರಕ ಅಲ್ಲ; ಜನಾರ್ಧನ ರೆಡ್ಡಿ ಆಗಮನದಿಂದ ಬಿಜೆಪಿಗೆ ಆನೆ ಬಲ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಯನ್ನೇ ನೀಡಿಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಡಾ. ವಾಮನಾಚಾರ್ಯ ಹೇಳಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಜನಾರ್ಧನ ರೆಡ್ಡಿ ಹಾಗೂ ಬಿಜೆಪಿಗೆ ಯಾವುದೇ ಸಂಬಂಧ ಇಲ್ಲ ಎಂದು ಅಮಿತ್ ಷಾ ಈಗಾಗಲೇ ಹೇಳಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ ಅವರು ಪ್ರಚಾರ ಮಾಡಬಹುದು. ಆದರೆ ಜನಾರ್ಧನ ರೆಡ್ಡಿ ಸ್ಟಾರ್ ಪ್ರಚಾರಕ ಅಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೇ 1 ಮತ್ತು 2ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಅಂದು ಬೆಂಗಳೂರು, ತುಮಕೂರು, ಚಾಮರಾಜನಗರ ಹಾಗೂ ಬಳ್ಳಾರಿಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಚುನಾವಣಾ ಪ್ರಚಾರದ ಉದ್ದೇಶದಿಂದ ಬೆಂಗಳೂರು, ಮೈಸೂರು, ಬೆಳಗಾವಿ, ಶಿವಮೊಗ್ಗ, ಮಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಮಾಧ್ಯಮ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಇದೆ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ‘ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುವುದು. ಈ ಬಾರಿ ಚುನಾವಣೆಯಲ್ಲಿ ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.