ಬೆಂಗಳೂರು: ಮೇ.12 ರಂದು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯದ ಮೂರು ಮತಗಟ್ಟೆಗಳಲ್ಲಿ ಇಂದು(ಮೇ 14) ಮರು ಮತದಾನ ನಡೆಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಜೀವ್ ಕುಮಾರ್, ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಲೊಟ್ಟಗೊಲ್ಲಹಳ್ಳಿಯ ಮತಗಟ್ಟೆ 2ರಲ್ಲಿ ಹಾಗೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಮನ್ನೆರಾಳದ ಮತಗಟ್ಟೆ ಸಂಖ್ಯೆ 20 ಮತ್ತು 21 ರಲ್ಲಿ ಇಂದು ಮತದಾನ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆ ನಡೆದಿದೆ ಎಂದು ಅವರು ತಿಳಿಸಿದರು.
ಮರು ಮತದಾನದಲ್ಲಿ ಮತದಾರರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಮತ ಚಲಾಯಿಸಲು ಅನುಕೂಲವಾಗುವಂತೆ ಈ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರಿ ಕಚೇರಿಗಳು, ರಾಜ್ಯ ಮತ್ತು ಕೇಂದ್ರ ಸ್ವಾಮ್ಯದ ಕೈಗಾರಿಕಾ ಸಂಸ್ಥೆಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವ ಮತದಾರರಿಗೆ ಒಂದು ದಿನದ ವೇತನ ಸಹಿತ ರಜೆ ಘೋಷಿಸಲಾಗಿದೆ.