ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಾದಾಮಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಸಂಬಂಧ ಅಧಿಕೃತ ಘೋಷಣೆ ಹೊರಬಿದ್ದ ಬೆನ್ನಲ್ಲೇ, ಆ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಈ ಮಧ್ಯೆ ಬಾದಾಮಿ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲು ನಾನು ಸಿದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಿದ್ದಾರೆ ಎಂದು ತಿಳಿಯುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ತಾವು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ದ ಎಂದು ಹೇಳಿದ್ದಾರೆ.


ಬಿಜೆಪಿ ಗುರಿ ಏನಿದ್ದರೂ ಕಾಂಗ್ರೆಸ್ ಮುಖ್ತ ಕರ್ನಾಟಕ ಮಾಡುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದು. ಹಾಗಾಗಿ ಪಕ್ಷದ ಹೈಕಮ್ಯಾಂಡ್ ಬಾದಾಮಿಯಿಂದಲೂ ಸ್ಪರ್ಧಿಸಲು ಹೇಳಿದರೆ, ಆ ತೀರ್ಮಾನಕ್ಕೆ ತಾವು ಬದ್ಧ ಎಂದು ಯಡಿಯೂರಪ್ಪ ಹೇಳಿದ್ದಾರೆ.


ಮತ್ತೊಂದೆಡೆ, ಬದಾಮಿಯಲ್ಲಿ ಹಿಂದುಳಿದ ವರ್ಗಗಳ ಮತ ಹೆಚ್ಚಾಗಿರುವುದರಿಂದ ಬಿಜೆಪಿ ಉಪ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಹೇಳಲಾಗುತ್ತಿರುವ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಸದ ಬಿ.ಶ್ರೀರಾಮುಲು ಅವರು ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇದಕ್ಕೆ ಗದಗದಲ್ಲಿ ಪ್ರತಿಕ್ರಿಯಿಸಿರುವ ಶ್ರೀರಾಮುಲು ಅವರು, ಇದುವರೆಗೂ ಪಕ್ಷದ ಹಿರಿಯರಿಂದ ಯಾವುದೇ ಸೂಚನೆ ಸಿಕ್ಕಿಲ್ಲ. ಒಂದು ವೇಳೆ ಸೂಚನೆ ನೀಡಿದರೆ ತಾವು ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವುದಾಗಿ ಹೇಳಿದ್ದಾರೆ. 


ಆದರೆ, ಬಾದಾಮಿ ಕ್ಷೇತ್ರದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಕುರುಬ ಮತದಾರರಿದ್ದಾರೆ. ಅವರನ್ನು ಹೊರತುಪಡಿಸಿ ಎರಡನೇ ಸ್ಥಾನದಲ್ಲಿ ಲಿಂಗಾಯತ ಮತದಾರರು ಹೆಚ್ಚಿದ್ದಾರೆ. ಹಾಗಾಗಿ ಆ ಕ್ಷೇತ್ರದ ಜನಮಾನಸವನ್ನರಿತ, ಲಿಂಗಾಯತ ಬೆಂಬಲಿತ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್ ಮಾಡುತ್ತಿದೆ. ಹಾಗಾಗಿ ಪ್ರಭಾವಿ ಲಿಂಗಾಯತ ನಾಯಕ ನೀರಜ್ ಪಾಟೀಲ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದ್ದು, ಈ ಮೂಲಕ ಸಿದ್ದರಾಮಯ್ಯಗೆ ಪ್ರಬಲ ಸ್ಪರ್ಧೆ ನೀಡಲು ತಂತ್ರ ರೂಪಿಸುತ್ತಿದೆ ಎನ್ನಲಾಗಿದೆ.