ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಸಮ್ಮುಖದಲ್ಲಿ ಸೋಮವಾರ ಇಲ್ಲಿ ಒಡಂಬಡಿಕೆಗೆ ಅಂಕಿತ ಹಾಕಲಾಯಿತು.


COMMERCIAL BREAK
SCROLL TO CONTINUE READING

ಬಳಿಕ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಏರ್ ಇಂಡಿಯಾದ ಮುಖ್ಯ ವಾಣಿಜ್ಯ ವ್ಯವಹಾರ ಅಧಿಕಾರಿ ನಿಪುಣ್ ಅಗರವಾಲ್ ಹಾಗೂ ಟಿಎಎಸ್ಎಲ್ ಸಿಇಒ ಸುಕರಣ್ ಸಿಂಗ್ ಒಡಂಬಡಿಕೆ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.


ವಿಧಾನಸೌಧದಲ್ಲಿ ನಡೆದ ಒಡಂಬಡಿಕೆ ವಿನಿಮಯದ ನಂತರ ಮಾತನಾಡಿದ ಸಚಿವ ಎಂ ಬಿ ಪಾಟೀಲ, `ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್ ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡುತ್ತಿದೆ. ಇದರಿಂದಾಗಿ  1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ಇಡೀ ಭಾರತದಲ್ಲಿ ಇದು ಇಂತಹ ಮೊಟ್ಟಮೊದಲ ಯೋಜನೆಯಾಗಿದೆ’ ಎಂದರು.


ಇದನ್ನೂ ಓದಿ- ಉದ್ಯಮ ಬೆಳವಣಿಗೆಗೆ ವಿಶಿಷ್ಟ ಮಾದರಿಯ ಹೊಸ ಸಂಸ್ಥೆ ರಚನೆ- ಸಚಿವ ಎಂ.ಬಿ.ಪಾಟೀಲ್


ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕಂಪನಿಯು ಮೂರು ಯೋಜನೆಗಳಿಗೆ 1,030 ಕೋಟಿ ರೂ. ಬಂಡವಾಳ ಹೂಡಲಿದೆ. ಇವುಗಳ ಪೈಕಿ 420 ಕೋಟಿ ರೂ.ಗಳನ್ನು ಅದು ನಾಗರಿಕ ವಿಮಾನಗಳನ್ನು ಸರಕು ಸಾಗಣೆ ವಿಮಾನಗಳನ್ನಾಗಿ (ಫ್ರೈಟರ್) ಪರಿವರ್ತಿಸುವ ಘಟಕ ಸ್ಥಾಪನೆಗೆ ವಿನಿಯೋಗಿಸಲಿದೆ. ಜೊತೆಗೆ 310 ಕೋಟಿ ರೂ. ಹೂಡಿಕೆಯೊಂದಿಗೆ ಗನ್ ತಯಾರಿಕೆ ಘಟಕ ಮತ್ತು 300 ಕೋಟಿ ರೂ. ವೆಚ್ಚದಲ್ಲಿ ವಿಮಾನಯಾನ ಮತ್ತು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಿದೆ. ಇದರಿಂದ 450 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ವಿವರಿಸಿದರು.


ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ಮತ್ತು ಕೋಲಾರದಲ್ಲಿ ಟಿಎಎಸ್ಎಲ್ ತಾನು ಸ್ಥಾಪಿಸಲಿರುವ ಗನ್ ತಯಾರಿಕೆ ಘಟಕದ ಮೂಲಕ ತನಗೆ ಅಗತ್ಯವಿರುವ 13 ಸಾವಿರ ಬಿಡಿಭಾಗಗಳ ಪೈಕಿ ಶೇಕಡ 50ರಷ್ಟನ್ನು ಪೂರೈಸಿಕೊಳ್ಳುವ ಆಲೋಚನೆ ಹೊಂದಿದೆ. ಇದರಿಂದಾಗಿ 300ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 2-3 ಸಾವಿರ ಜನರಿಗೆ ಉದ್ಯೋಗಗಳು ಸಿಗಲಿವೆ. 1939ರಷ್ಟು ಹಿಂದೆಯೇ ಬೆಂಗಳೂರಿನಲ್ಲಿ ಎಚ್ಎಎಲ್ ಸ್ಥಾಪನೆಯಾಗುವುದರೊಂದಿಗೆ ರಾಜ್ಯವು ವೈಮಾನಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂದು ಅವರು ಹೇಳಿದರು.


ರಕ್ಷಣಾ ಇಲಾಖೆಗೆ ಬೇಕಾಗುವ ವಿಮಾನಗಳು ಮತ್ತು ಹೆಲಿಕಾಪ್ಟರುಗಳ ಪೈಕಿ ಶೇಕಡ 67ರಷ್ಟು ಕರ್ನಾಟಕದಲ್ಲೇ ತಯಾರಾಗುತ್ತಿದೆ. ಜತೆಗೆ ದೇಶದ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದ ರಫ್ತು ವಹಿವಾಟಿಗೆ ರಾಜ್ಯವು ಶೇಕಡ 65ರಷ್ಟು ಕೊಡುಗೆ ನೀಡುತ್ತಿದೆ. ದೇಶದಲ್ಲಿ ಈ ವಲಯದಲ್ಲಿರುವ ಕಂಪನಿಗಳ ಪೈಕಿ ಶೇ.70ರಷ್ಟು ಕಂಪನಿಗಳು ಕರ್ನಾಟಕದಲ್ಲೇ ನೆಲೆ ಹೊಂದಿವೆ.


ಇದನ್ನೂ ಓದಿ- ರಾಜ್ಯದ ಕೈಗಾರಿಕಾ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ, ತ್ವರಿತ ಕ್ರಮಕ್ಕೆ ಸೂಚನೆ: ಎಂ ಬಿ ಪಾಟೀಲ್


ಕಾರ್ಯಕ್ರಮದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಏರ್ ಇಂಡಿಯಾದ ಉನ್ನತಾಧಿಕಾರಿಗಳಾದ  ಮನನ್ ಚೌಹಾಣ್, ಕಾರ್ತಿಕೇಯ ಭಟ್, ಅತುಲ್ ಶುಕ್ಲ, ಟಿಎಎಸ್ಎಲ್ ಉನ್ನತಾಧಿಕಾರಿಗಳಾದ ಗುರು ದತ್ತಾತ್ರೇಯ, ಅರ್ಜುನ್ ಮೈನೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಹರಿ ಮಾರಾರ್, ಸಿಒಒ ಸಾತ್ಯಕಿ ರಘುನಾಥ್, ಸಿಎಫ್ಒ ಭಾಸ್ಕರ್ ರವೀಂದ್ರ ಮುಂತಾದವರು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.