)
Udyoga Mela: ದೇಶದ ಅತ್ಯಂತ ದೊಡ್ಡ ಸಮಸ್ಯೆ 'ನಿರುದ್ಯೋಗ'. ಅದಾಗ್ಯೂ, ನಿರುದ್ಯೋಗ ನಿವಾರಣೆಗೆ ಕೇಂದ್ರ ಸರ್ಕಾರ ಸರಿಯಾಗಿ ಗಮನ ಹರಿಸುತ್ತಿಲ್ಲ. ಆದರೆ, ರಾಜ್ಯ ಸರ್ಕಾರ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ, ಇದರ ಭಾಗವಾಗಿ ರಾಜ್ಯ ಸರ್ಕಾರ'ಬೃಹತ್ ಉದ್ಯೋಗ ಮೇಳ'ವನ್ನು ಆಯೋಜಿಸಿದೆ ಎಂದು ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ಅಕ್ಟೋಬರ್ 17ರಂದು ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್, ದೇಶದಲ್ಲಿ ನಿರುದ್ಯೋಗ ಅತ್ಯಂತ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಆದರೂ ಮೋದಿ ಸರ್ಕಾರ ನಿರುದ್ಯೋಗ ನಿವಾರಣೆಗೆ ಸೂಕ್ತ ಕ್ರಮ ವಹಿಸುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಇದೇ ವೇಳೆ, ನಿರುದ್ಯೋಗದಿಂದ ಪರಿಹಾರ ಕಲ್ಪಿಸಲು ಸಿದ್ದರಾಮಯ್ಯ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಮೈಸೂರಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಾತನಾಡಿದ ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್, ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 17ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 'ಬೃಹತ್ ಉದ್ಯೋಗ ಮೇಳ' ನಡೆಯಲಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಉದ್ಯೋಗ ಮೇಳದಲ್ಲಿ ಭಾಗಿಯಾಗಲು ಈಗಾಗಲೇ 24 ಸಾವಿರ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. 15 ಸಾವಿರ ಮಂದಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ವಿವಿಧೆಡೆಗಳಿಂದ ಆಗಮಿಸಲಿರುವ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಲಿದ್ದಾರೆ ಎಂದರು.
ಯುವನಿಧಿ ಯೋಜನೆಯಡಿ ನೋಂದಣಿಯಾಗಿರುವವರಿಗೆ ಉದ್ಯೋಗ ನೀಡಲು ಕ್ರಮ:
ಯುವನಿಧಿ ಯೋಜನೆಯಡಿ ಈಗಾಗಲೇ ನೋಂದಣಿಯಾಗಿರುವ ಮೈಸೂರು ವಿಭಾಗದ 43577 ಫಲಾನುಭವಿಗಳ ಜೊತೆಗೆ ಇತರೆ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಅವಕಾಶ ಹೊಂದಿರುವ ಉದ್ಯೋಗದಾತರೊಂದಿಗೆ ನೇರ ಭೇಟಿಗಾಗಿ ಅವಕಾಶ ಕಲ್ಪಿಸಲು ಈ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದವರು ಇದೇ ವೇಳೆ ತಿಳಿಸಿದರು.
ಉದ್ಯೋಗ ಮೇಳದಲ್ಲಿ ಭಾಗಿಯಾಗಲಿವೆ 221 ಕಂಪನಿಗಳು:
ಇದುವರೆಗೂ 221 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದು ಮತ್ತಷ್ಟು ಕಂಪನಿಗಳು ಸೇರ್ಪಡೆ ಆಗಲಿವೆ ಎಂದು ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್ ಮಾಹಿತಿ ನೀಡಿದರು.