ಬೆಂಗಳೂರು: ಹಿರಿಯ ನರ, ಮಾಜಿ ಸಚಿವ ಅಂಬರೀಶ್ ಅವರ ಅಕಾಲಿಕ ಮರಣ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಅಂಬರೀಶ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕನ್ನಡ ಚಿತ್ರರಂಗ ಕಂಡ ಮಹತ್ವದ ಕಲಾವಿದ ಹಾಗೂ ಅಪರೂಪದ ವ್ಯಕ್ತಿತ್ವದ ರಾಜಕಾರಣಿ ಇನ್ನಿಲ್ಲ ಎನ್ನುವುದು ಅಪಾರ ದುಃಖವನ್ನುಂಟುಮಾಡಿದೆ. ನನ್ನ ಮತ್ತು ಅವರ ಸ್ನೇಹ ಅನುಗಾಲದ್ದು. ಚಿತ್ರರಂಗ ಹಾಗೂ ರಾಜಕಾರಣವನ್ನು ಮೀರಿದ ಸ್ನೇಹ ನಮ್ಮದಾಗಿತ್ತು ಎಂದು ಟ್ವೀಟ್ ಮಾಡಿದ್ದಾರೆ. 


ಅಂಬರೀಶ್ ಹೃದಯ ಶ್ರೀಮಂತಿಕೆಯ ವ್ಯಕ್ತಿತ್ವವುಳ್ಳವರಾಗಿದ್ದರು. ಹಾಗಾಗಿಯೇ ಅವರು ಪ್ರತಿಯೊಬ್ಬರ ಗೌರವಕ್ಕೆ ಪಾತ್ರರಾಗಿದ್ದರು. ಅಂಬರೀಶ್ ಅವರ ಅಕಾಲಿಕ ಮರಣ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೂ ಹಾಗೂ ಅಪಾರ ಅಭಿಮಾನಿಗಳಿಗೂ ನೀಡಲಿ ಎಂದು ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.


ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್‌(66) ಅವರು ತೀವ್ರ ಎದೆನೋವು ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಶನಿವಾರ ಸಂಜೆ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11 ಗಂಟೆಗೆ ಸುಮಾರಿಗೆ ಕೊನೆಯುಸಿರೆಳೆದರು.