ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಮೋದಿ ಸರ್ಕಾರ ಸಿಬಿಐಗೆ ನಿರ್ದೇಶನ ನೀಡಿದೆ. ಈ ಹಿನ್ನೆಲೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
"ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಪಾಟ್ನಾದಲ್ಲಿ ದಾಖಲಿಸಿರುವ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ರಾಜ್ಯ ಸರ್ಕಾರದ ಶಿಫಾರಸನ್ನು ಕೇಂದ್ರ ಸರ್ಕಾರ ಸ್ವೀಕರಿಸಿದೆ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು. ಈಗ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಯಲಿದ್ದು, ನ್ಯಾಯ ದೊರಯಲಿದೆ ಎಂದು ನಾನು ಭಾವಿಸುತ್ತೇನೆ" ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಬುಧವಾರ ಸಿಬಿಐಗೆ ಅಧಿಸೂಚನೆ ಜಾರಿಗೊಳಿಸಿದೆ. ಜೂನ್ 14 ರಂದು ಸುಶಾಂತ್ ಸಿಂಗ್ ರಾಜ್ಪುತ್ ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದರು.
ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು, ಅಧಿಸೂಚನೆಯ ಪ್ರತಿಯನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ಕಳುಹಿಸಲಾಗಿದ್ದು, ಪ್ರಕರಣದ ತನಿಖೆ ನಡೆಸಲು ತಿಳಿಸಲಾಗಿದೆ ಎಂದಿದ್ದಾರೆ. ರಜಪೂತ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ದಾರಿ ಮಾಡಿಕೊಟ್ಟ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಈ ಅಧಿಸೂಚನೆಯನ್ನು ಹೊರಡಿಸಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.