ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಆದರೆ ಅಭಿಮಾನಿಯೊಬ್ಬರು ತಮ್ಮ ನೆಚ್ಚಿನ ನಟನ ಮನೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಹೊಸಕೆರೆಹಳ್ಳಿಯಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಯಶ್ ಹುಟ್ಟುಹಬ್ಬದಂದು ಅವರನ್ನು ನೋಡಲು ಅವಕಾಶ ಸಿಗಲಿಲ್ಲ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬ ಯಶ್ ಮನೆ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ನೆಲಮಂಗಲ ತಾಲೂಕಿನ ನಿವಾಸಿ ರವಿ ಎಂದು ಗುರುತಿಸಲಾಗಿದೆ. 


ಕನ್ನಡ ಚಿತ್ರರಂಗದ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಇತ್ತೀಚೆಗಷ್ಟೇ ನಿಧನರಾದ ಹಿನ್ನೆಲೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದ ಯಶ್, ಅಭಿಮಾನಿಗಳು ಸಹಕರಿಸುವಂತೆ ಮನವಿ ಮಾಡಿದ್ದರು. ಆದಾಗ್ಯೂ, ಇಂದು ಬೆಳಗ್ಗಿನಿಂದಲೇ ಯಶ್​ ನಿವಾಸದ ಬಳಿ ಅಭಿಮಾನಿಗಳ ದಂಡೇ ಸೇರಿತ್ತು. ಯಶ್​ರನ್ನು ಕಂಡು ಅವರಿಗೆ ಶುಭಕೋರುವ ಸಲುವಾಗಿ ಕಾಯುತ್ತಿದ್ದ ಅಭಿಮಾನಿಗಳಲ್ಲಿ ಒಬ್ಬರು ಯಶ್​ರನ್ನು ನೋಡಲು ಬಿಡದಕ್ಕೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.  


ಆತ್ಮಹತ್ಯೆಗೆ ಯತ್ನಿಸಿ, ತೀವ್ರವಾಗಿ ಗಾಯಗೊಂಡ ಅಭಿಮಾನಿ ರವಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ. ಅವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.