ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವ ಎನ್‌ಡಿಎ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಮತ್ತು ಎನ್‌ಸಿಪಿ ವಿರೋಧಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ.
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಾರ ಕಾರ್ಯದ ನಿಮಿತ್ತ ಸಾಂಗ್ಲಿ ಜಿಲ್ಲೆಯ ಜತ್ ನಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶಾ, ಒಂದು ವೇಳೆ ರಾಹುಲ್ ಗಾಂಧಿ, ಶರದ್ ಪವಾರ್ ಅವರು 370 ನೇ ವಿಧಿಯನ್ನು ರದ್ದುಗೊಳಿಸುವ ಒಲವು ತೋರಿದರೆಸ್ಪಷ್ಟಪಡಿಸಬೇಕು ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370ನೇ ವಿಧಿಯನ್ನು ರದ್ದುಗೊಳಿಸುವ ಉತ್ತಮ ಕೆಲಸ ಮಾಡಿದ್ದಕ್ಕಾಗಿ ನರೇಂದ್ರ ಮೋದಿಯವರ ಬಗ್ಗೆ ಶಾ ಪ್ರಶಂಸೆ ವ್ಯಕ್ತಪಡಿಸಿದರು. ಇಂತಹ ಕ್ರಮದ ಮೂಲಕ ಪ್ರಧಾನಿಯವರು ರಾಷ್ಟ್ರೀಯ ಭದ್ರತೆಯನ್ನು ಖಾತರಿಪಡಿಸಿದ್ದಾರೆ ಎಂದು ಹೇಳಿದರು.
ಮೋದಿಯವರ ನೇತೃತ್ವದಲ್ಲಿ ರಾಷ್ಟ್ರೀಯ ಭದ್ರತೆ ಬಲಗೊಂಡಿದೆ ಮತ್ತು ಒಬ್ಬ ಭಾರತೀಯ ಜವಾನ್ ಹುತಾತ್ಮರಾದರೆ 10 ಶತ್ರುಗಳು ಕೊಲ್ಲಲ್ಪಡುತ್ತಾರೆ ಎಂದು ಇಡೀ ಜಗತ್ತಿಗೆ ತಿಳಿದಿದೆ ಎಂದು ಪರೋಕ್ಷವಾಗಿ ಬಾಲಾಕೋಟ ವಾಯುದಾಳಿಯನ್ನು ಉಲ್ಲೇಖಿಸಿದರು. ಈ ಹಿಂದಿನ ಕಾಂಗ್ರೆಸ್-ಎನ್‌ಸಿಪಿ ಸಮ್ಮಿಶ್ರ ಸರ್ಕಾರಗಳು ಮಹಾರಾಷ್ಟ್ರದಲ್ಲಿ ಮಾಡಿರುವ ಕಾರ್ಯಗಳ ಬಗ್ಗೆ ತಿಳಿಸಲು ಶಾ ಆಗ್ರಹಿಸಿದರು.