ಉತ್ತರಾಖಂಡ್: ಹೃಶಿಕೇಶ್-ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಸರ್ಕಾರಿ ಬಸ್ಸೊಂದು ಸೂರ್ಯಧರ್ ಬಳಿ ಆಯತಪ್ಪಿ 250 ಅಡಿ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 18 ಮಂದಿ ಗಂಭಿರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಅಪಘಾತ ಸಂಭವಿಸಿದ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲು ಅನುಕೂಲವಾಗುವಂತೆ ಹೆಲಿಕಾಪ್ಟರ್ ವ್ಯವಸ್ಥೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೆ, ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂ. ಪರಿಆರವನ್ನು ಸರ್ಕಾರ ಘೋಷಣೆ ಮಾಡಿದೆ. ಈ ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.
ಕೆಲ ದಿನಗಳ ಹಿಂದೆ ಉತ್ತರಾಖಂಡ್'ನ ಗರ್ವಾಲ್ ಜಿಲ್ಲೆಯಲ್ಲಿ ಬಸ್ಸೊಂದು 200 ಮೀಟರ್ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ 48 ಮಂದಿ ಮೃತಪಟ್ಟಿದ್ದರು. ಅಲ್ಲದೆ, ತೀವ್ರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 28 ಆಸನಗಳ ಬಸ್ಸಿನಲ್ಲಿ ಸುಮಾರು 50 ಮಂದಿ ಪ್ರಯಾಣಿಸುತ್ತಿದ್ದರು. ಇದೀಗ ಇಂತಹದ್ದೇ ಮತ್ತೊಂದು ಘಟನೆ ಹೃಶಿಕೇಶ್-ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ಸುಗಳು ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಕರೆದೊಯ್ಯುತ್ತಿರುವುದು ಅಥವಾ ರಸ್ತೆ ತಿರುವುಗಳಲ್ಲಿ ತಡೆಗೋಡೆಗಳನ್ನು ನಿರ್ಮಿಸದಿರುವುದು ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಶಂಕಿಸಲಾಗಿದೆ.