ರಸ್ತೆ ವಿಭಜಕಕ್ಕೆ ಖಾಸಗಿ ಬಸ್ ಡಿಕ್ಕಿ; 17 ಸಾವು, 35 ಮಂದಿ ಗಾಯ
ಖಾಸಗಿ ಬಸ್ ಒಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಸುಮಾರು 17 ಪ್ರಯಾಣಿಕರು ಮೃತಪಟ್ಟಿದ್ದಾರೆ.
ಲಖನೌ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಸುಮಾರು 17 ಪ್ರಯಾಣಿಕರು ಮೃತಪಟ್ಟಿದ್ದು, 35 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮೈನ್ಪುರಿ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಅತಿ ವೇಗವಾಗಿ ಚಲಿಸುತ್ತಿದ್ದ ಬಸ್ ನಿಯಂತ್ರಣ ಕಳೆದುಕೊಂಡ ಪರಿಣಾಮ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಈಗಾಗಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಬಸ್ ಚಾಲಕನಿಗೂ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ಆತನ ಹೇಳಿಕೆ ಪಡೆಯಲು ಕಾಯುತ್ತಿದ್ದಾರೆ.
ಈ ಮಧ್ಯೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ದುರಂತದಲ್ಲಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಜತೆಗೆ ಗಾಯಾಳುಗಳಿಗೆ ಅಗತ್ಯವಾದ ಚಿಕಿತ್ಸೆಗೆ ಅನುವು ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.