ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿರುವ ಆಮ್ ಆದ್ಮಿ ಪಕ್ಷ, ಕನಿಷ್ಠ 25 ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಿದೆ. ದೇಶದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಯಾಗುವ ಸಂದರ್ಭ ಎದುರಾದರೆ ರಾಷ್ಟ್ರ ರಾಜಕಾರಣದಲ್ಲಿ ಎಎಪಿ ತನ್ನ ಸ್ಥಾನ ಗಟ್ಟಿ ಮಾಡಿಕೊಳ್ಳಲು ಚಿಂತನೆ ನಡೆಸಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ನಾಯಕರು, "2019ರ ಲೋಕಸಭಾ ಚುನಾವಣೆಯಲ್ಲಿ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಇವುಗಳಲ್ಲಿ ಕನಿಷ್ಠ 25 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಪಕ್ಷ ಹೊಂದಿದ್ದು, ವಿಶೇಷವಾಗಿ ದೆಹಲಿ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಪ್ರಬಲ ಸಾಂಸ್ಥಿಕ ಬೆಂಬಲ ಹೊಂದಿದ್ದೇವೆ" ಎಂದಿದ್ದಾರೆ.
ದೆಹಲಿ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಷ್ಟೇ ಅಲ್ಲದೆ, ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನ, ಚತ್ತೀಸ್ಘಡ, ಮಧ್ಯಪ್ರದೇಶ ರಾಜ್ಯಗಳಲ್ಲಿಯೂ ಲೋಕಸಭೆ ಚುನಾವಣೆ ಬಗ್ಗೆ ಹೆಚ್ಚು ಗಮನಹರಿಸಲು ಪಕ್ಷ ನಿರ್ಧರಿಸಿದೆ. ಇದರೊಂದಿಗೆ ಬಿಹಾರ, ಉತ್ತರ ಪ್ರದೇಶ ಮತ್ತು ಗುಜರಾತ್ ರಾಜ್ಯಗಳ ಆಯ್ದ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಎಪಿ ಚಿಂತನೆ ನಡೆಸಿದೆ.
13 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಪಂಜಾಬ್ ರಾಜ್ಯದಲ್ಲಿ 4 ಲೋಕಸಭಾ ಸ್ಥಾನಗಳನ್ನು ಆಮ್ ಆದ್ಮಿ ಪಕ್ಷ ಹೊಂದಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತಷ್ಟು ಸ್ಥಾನ ಗಳಿಸುವ ಗುರಿ ಹೊಂದಿದೆ. ಈಗಾಗಲೇ ಪಕ್ಷದ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹರಿಯಾಣದ ಹಲವು ಕ್ಷೇತ್ರಗಳಿಗೆ ಭೇಟಿ ನೀಡಿ ಪಕ್ಷ ಸಂಘಟನೆ ಬಗ್ಗೆ ಅಲ್ಲಿನ ಮುಖಂಡರೊಂದಿಗೆ ಚರ್ಚೆ ನಡೆಸಿದ್ದಾರೆ. ಹರಿಯಾಣದ 10 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಎಎಪಿ ಪ್ರಬಲ ಸ್ಪರ್ಧೆ ನೀಡಲಿದೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.