ಪ್ರತಿಮೆಗಳ ಧ್ವಂಸ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಪ್ರಧಾನಿ ಮೋದಿ ಸೂಚನೆ
ಐತಿಹಾಸಿಕ ವ್ಯಕ್ತಿಗಳ ಪ್ರತಿಮೆ ಧ್ವಂಸ ಪ್ರಕರಣಗಳನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
ನವದೆಹಲಿ : ಐತಿಹಾಸಿಕ ವ್ಯಕ್ತಿಗಳ ಪ್ರತಿಮೆ ಧ್ವಂಸ ಪ್ರಕರಣಗಳನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
"ದೇಶದ ಕೆಲವು ಭಾಗಗಳಲ್ಲಿ ನಡೆದ ವಿಧ್ವಂಸಕ ಘಟನೆಗಳನ್ನು ಕೇಂದ್ರ ಗೃಹ ಸಚಿವಾಲಯ ವರದಿ ಮಾಡಿದ್ದು, ಇಂತಹ ಗಲಭೆಗಳನ್ನು ಗಂಭಿರವಾಗಿ ಪರಿಗಣಿಸಿದೆ. ಈ ವಿಷಯದಲ್ಲಿ ಪ್ರಧಾನಮಂತ್ರಿ ಕೂಡ ಗೃಹ ಸಚಿವರೊಂದಿಗೆ ಚರ್ಚೆ ನಡೆಸಿದ್ದು, ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ" ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸಚಿವಾಲಯ ಸೂಚನೆ ನೀಡಿದ್ದು, ಅಂತಹ ಕೃತ್ಯಗಳಲ್ಲಿ ಪಾಲ್ಗೊಳ್ಳುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹೇಳಿದೆ.
ಕಮ್ಯುನಿಸ್ಟ್ ನಾಯಕ ಲೆನಿನ್ ಅವರ ಎರಡು ಪ್ರತಿಮೆ ಹಾಗೂ ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಯನ್ನು ಧ್ವಂಸ ಪ್ರಕರಣದ ಬೆನ್ನಲ್ಲೇ ಕೋಲ್ಕತಾದ ಕಾಳಿಘಾಚ್ ನಲ್ಲಿರುವ ಶ್ಯಾಮ್ ಪ್ರಸಾದ್ ಮುಖರ್ಜಿ ಪ್ರತಿಮೆಯನ್ನೂ ಧ್ವಂಸ ಮಾಡಲಾಗಿರುವ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಕಠಿಣ ಆದೇಶ ನೀಡಿದೆ.