ಅರುಣ್ ಜೇಟ್ಲಿ ಆರೋಗ್ಯ ವಿಚಾರಿಸಿದ ಅರವಿಂದ್ ಕೇಜ್ರಿವಾಲ್, ಅಶ್ವಿನಿ ಚೌಬೆ
ಅಶ್ವಿನಿ ಚೌಬೆ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಆರೋಗ್ಯದ ಬಗ್ಗೆ ವಿಚಾರಿಸಿದರು.
ನವದೆಹಲಿ: ಅಶ್ವಿನಿ ಚೌಬೆ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಆರೋಗ್ಯದ ಬಗ್ಗೆ ವಿಚಾರಿಸಿದರು.
ಕೇಜ್ರಿವಾಲ್ ಅವರೊಂದಿಗೆ ದೆಹಲಿ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಸಹ ಆಸ್ಪತ್ರೆಗೆ ಭೇಟಿ ನೀಡಿದ್ದರು. ಹೃದಯ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ 66 ವರ್ಷದ ಮಾಜಿ ಹಣಕಾಸು ಸಚಿವರ ಅರುಣ್ ಜೇಟ್ಲಿ ಅವರನ್ನು ಸದ್ಯ ಜೀವ ರಕ್ಷಕ ವ್ಯವಸ್ಥೆಯಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಇದಕ್ಕೂ ಮುನ್ನ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳ ನಾಯಕರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದರು.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಹರ್ಷ ವರ್ಧನ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಆಸ್ಪತ್ರೆಗೆ ಭೇಟಿ ನೀಡಿ ಜೇಟ್ಲಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಆಗಸ್ಟ್ 9ರಂದು ಅನಾರೋಗ್ಯ ನಿಮಿತ್ತ ಏಮ್ಸ್ ಆಸ್ಪತ್ರೆಗೆ ದಾಕಲಾದ ಅರುಣ್ ಜೇಟ್ಲಿ ಅವರ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿದ್ದು, ಸದ್ಯ ಜೀವ ರಕ್ಷಕ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಆದರೆ ಜೇಟ್ಲಿ ಆರೋಗ್ಯದ ಬಗ್ಗೆ ಆಸ್ಪತ್ರೆ ವತಿಯಿಂದ ಯಾವುದೇ ಆರೋಗ್ಯ ಮಾಹಿತಿ ನೀಡಲಾಗಿಲ್ಲ.