ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿಯ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಕಾಂಗ್ರೆಸ್ ಗೆ ಬಹಳ ಪ್ರಮುಖವಾಗಿವೆ. ಈ ಚುನಾವಣೆಯಲ್ಲಿ ಗೆಲ್ಲುವುದು ಕಾಂಗ್ರೆಸ್ ಗೆ ಬಹಳ ಮುಖ್ಯವಾಗಿದ್ದು, ಇದಕ್ಕಾಗಿ ಪಕ್ಷದ ಕಾರ್ಯಕರ್ತರು ದೇವರ ಮೊರೆ ಹೋಗಿದ್ದಾರೆ.


COMMERCIAL BREAK
SCROLL TO CONTINUE READING

ಪಂಚ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ಮಿಜೋರಾಂ ಮತ್ತು ತೆಲಂಗಾಣ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ 8 ಗಂಟೆಯಿಂದಲೇ ಆರಂಭವಾಗಿದ್ದು, ಇಂದು ಮಧ್ಯಾಹ್ನದ ಒಳಗೆ ಫಲಿತಾಂಶಗಳು ಹೊರಬೀಳುವ ಸಾಧ್ಯತೆ ಇದೆ. ಈ ಮೂಲಕ ಯಾವ ಪಕ್ಷ ಎಷ್ಟು ಸ್ಥಾನಗಳನ್ನು ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬುದು ಸ್ಪಷ್ಟವಾಗಲಿದೆ. ಈಗಾಗಲೇ ಲೋಕಸಭಾ ಚುನಾವಣೆಗೆ ಸಾಕಷ್ಟು ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಹೊಂದಿದೆ. 


ಮತ್ತೊಂದೆಡೆ, ಕಾಂಗ್ರೆಸ್ ಗೆಲುವಿಗಾಗಿ ಕಾರ್ಯಕರ್ತರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ದೆಹಲಿಯಲ್ಲಿರುವ ನಿವಾಸದ ಹೊರಗೆ ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ, ಕಮಲ್ ನಾಥ್, ಸಚಿನ್ ಪೈಲೆಟ್ ಮೊದಲಾದ ನಾಯಕರ ಪೋಟೋಗಳನ್ನು ಇರಿಸಿ ಹೋಮ ಹವನಗಳನ್ನು ಆರಂಭಿಸಿದ್ದಾರೆ. 


ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಈ ಹಿಂದೆ ಕರ್ನಾಟಕ, ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗಳಲ್ಲಿಯೂ ಸಹ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೇವಸ್ಥಾನಗಳಿಗೆ ಭೇಟಿ ನೀಡಿದ್ದರು. ಆದಾಗ್ಯೂ ಕಾಂಗ್ರೆಸ್ ಪಕ್ಷದ ಪೂಜೆ ಪುನಸ್ಕಾರಗಳು ಫಲಿಸಲಿಲ್ಲ. ಆದರೆ, ಈ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭವಿಷ್ಯ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.