ಬಿಜೆಡಿ ಮಹಾಘಟಬಂಧನ್ಗೆ ಸೇರುವ ಪ್ರಶ್ನೆಯೇ ಇಲ್ಲ: ನವೀನ್ ಪಟ್ನಾಯಕ್
ಯಾವುದೇ ಕಾರಣಕ್ಕೂ ಬಿಜೆಡಿ ಮಹಾಘಟಬಂಧನ್ ಗೆ ಸೇರುವುದಿಲ್ಲ. ನಮ್ಮ ಪಕ್ಷದ ತತ್ವ ಮತ್ತು ಸಿದ್ಧಾಂತಗಳಿಗೆ ನಾವು ಬದ್ಧರಾಗಿದ್ದು, ಪಕ್ಷವು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಂದ ಸಮಾನ ಅಂತರ ಕಾಯ್ದುಕೊಳ್ಳಲಿದೆ ಎಂದು ನವೀನ್ ಪಟ್ನಾಯಕ್ ಹೇಳಿದ್ದಾರೆ.
ಭುವನೇಶ್ವರ: ಬಿಜೆಪಿ ವಿರೋಧಿ ಪಕ್ಷಗಳ ಮೈತ್ರಿಕೂಟ ಮಹಾಘಟಬಂಧನ್ಗೆ ಬಿಜು ಜನತಾದಳ(ಬಿಜೆಡಿ) ಸೇರುವ ಪ್ರಶ್ನೆಯೇ ಇಲ್ಲ ಎಂದು ಬಿಜೆಡಿ ಅಧ್ಯಕ್ಷ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬುಧವಾರ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಬಿಜೆಡಿ ಮಹಾಘಟಬಂಧನ್ ಗೆ ಸೇರುವುದಿಲ್ಲ. ನಮ್ಮ ಪಕ್ಷದ ತತ್ವ ಮತ್ತು ಸಿದ್ಧಾಂತಗಳಿಗೆ ನಾವು ಬದ್ಧರಾಗಿದ್ದು, ಪಕ್ಷವು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಂದ ಸಮಾನ ಅಂತರ ಕಾಯ್ದುಕೊಳ್ಳಲಿದೆ ಎಂದು ನವೀನ್ ಪಟ್ನಾಯಕ್ ಹೇಳಿದ್ದಾರೆ.
ಇದಕ್ಕೂ ಮುನ್ನ, ಪಕ್ಷವು ಮಹಾಘಟಬಂಧನ್ ಗೆ ಸೇರಬೇಕೆ, ಬೇಡವೇ ಎಂಬುದರ ಬಗ್ಗೆ ಎಲ್ಲರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಿದೆ. ಅದಕ್ಕಾಗಿ ಸ್ವಲ್ಪ ಸಮಯ ಬೇಕಿದೆ ಎಂದು ಮಂಗಳವಾರ ಹೇಳಿದ್ದರು.
ಈಗಾಗಲೇ ಒಡಿಶಾದಲ್ಲಿ ತನ್ನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ. 2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೇವಲ 1 ಸ್ಥಾನವನ್ನು ಗೆದ್ದಿತ್ತು. ಇನ್ನು, ಬಿಜೆಪಿ 20 ಸ್ಥಾನ ಗೆದ್ದರೆ, ಕಾಂಗ್ರೆಸ್ ಖಾತೆಯನ್ನೇ ತೆರೆದಿರಲಿಲ್ಲ.
ರಾಜ್ಯದಲ್ಲಿ 2017 ರಲ್ಲಿ ನಡೆದ ಪಂಚಾಯತ್ ಚುನಾವಣೆಯಲ್ಲಿ ಭಾರೀ ಯಶಸ್ಸನ್ನು ಗಳಿಸಿದ ಬಳಿಕ, ಪಕ್ಷವನ್ನು ಮತ್ತಷ್ಟು ಭದ್ರವಾಗಿ ನೆಲೆಯೂರುವಂತೆ ಮಾಡುವ ಉದ್ದೇಶದಿಂದ ಬಿಜೆಪಿ ಒಡಿಶಾ ರಾಜ್ಯದ ಮೇಲೆ ಗಮನ ಕೇಂದ್ರೀಕರಿಸಿದೆ. 2017 ರ ಪಂಚಾಯತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಯಶಸ್ಸು, 2019ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ನಾಂದಿ ಎನ್ನಲಾಗುತ್ತಿದೆ.