ಜಮ್ಮು-ಕಾಶ್ಮೀರದಲ್ಲಿ ಪಿಡಿಪಿಗೆ ಬಿಜೆಪಿ ಗುಡ್ ಬೈ; ಮುಖ್ಯಮಂತ್ರಿ ಮೆಹಬೂಬ ಮುಫ್ತಿ ರಾಜೀನಾಮೆ
ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಜೊತೆಗಿನ ಮೈತ್ರಿ ಅಂತ್ಯಗೊಳಿಸಿದೆ.
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಜೊತೆಗಿನ ಮೈತ್ರಿ ಅಂತ್ಯಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಸೇರಿದಂತೆ ಪಿಡಿಪಿ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ನಾಯಕ ರಾಮ್ ಮಹದೇವ್, ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಸಾಕಷ್ಟು ನೆರವು ನೀಡಿದ್ದರೂ ಸಹ, ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವಲ್ಲಿ ಮುಖ್ಯಮಂತ್ರಿ ಮುಫ್ತಿ ಅವರು ವಿಫಲವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರೊಂದಿಗೆ ಚರ್ಚಿಸಿ ಮೈತ್ರಿ ಅಂತ್ಯಗೊಳಿಸಿರುವುದಾಗಿ ಹೇಳಿದರು.
ಪೀಪಲ್ಸ್ ಡೆಮೊಕ್ರಟಿಕ್ ಪಾರ್ಟಿ(ಪಿಡಿಪಿ) ಜೊತೆಗಿನ ಮೈತ್ರಿಯನ್ನು ಬಿಜೆಪಿ ಕಡಿದುಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಮತ್ತು ಪಿಡಿಪಿ ಸಚಿವರು ರಾಜ್ಯಪಾಲ ನರಿಂದರ್ ನಾಥ್ ವೋಹ್ರಾ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.
2014ರಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಪಿಡಿಪಿ 28, ಬಿಜೆಪಿ 25, ನ್ಯಾಷನಲ್ ಕಾನ್ಫರೆನ್ಸ್ 15 ಮತ್ತು ಕಾಂಗ್ರೆಸ್ 12 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇತರರು 7 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ವಿಧಾನಸಭೆಯಲ್ಲಿ ಯಾರಿಗೂ ಬಹುಮತ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ರಚಿಸಿದ ಹಿನ್ನೆಲೆಯಲ್ಲಿ ಪಿಡಿಪಿಯ ಮೆಹಬೂಬಾ ಮುಫ್ತಿ ಮುಖ್ಯಮಂತ್ರಿಯಾಗಿದ್ದರು.