ಬೆಂಗಳೂರು: ಕರ್ನಾಟಕದ ಆರೂವರೆ ಕೋಟಿ ಜನತೆಯ ಅಪೇಕ್ಷೆಯಂತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ನಿಯೋಜಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ಸಂಜೆ 6 ಗಂಟೆಗೆ ರಾಜಭವನದಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ ಅವರು, ಕಳೆದ 14 ತಿಂಗಳಿನಿಂದ ರಾಜ್ಯದಲ್ಲಿ ಮೈತ್ರಿ ಸರ್ಕಾರದಿಂದಾಗಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿತ್ತು. ಆದರೀಗ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದು, ಜನರಿಗೆ ಉತ್ತಮ ಆಡಳಿತ ನೀಡುವ ಸಂಕಲ್ಪದೊಂದಿಗೆ ಪ್ರಮಾಣವಚನ ಸ್ವೀಕಾರ ಮಾಡುತ್ತೇನೆ ಎಂದು ಹೇಳಿದರು.


ಮುಂದುವರೆದು ಮಾತನಾಡುತ್ತಾ, ನಾನೆಂದೂ ಸೇಡಿನ ರಾಜಕಾರಣ ಮಾಡುವುದಿಲ್ಲ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ಹಿಂದಿನ ಸರ್ಕಾರದ ಆಡಳಿತಕ್ಕೂ, ಈಗಿನ ಆಡಳಿತಕ್ಕೂ ಎಷ್ಟು ವ್ಯತ್ಯಾಸ ಇರಲಿದೆ ಎಂಬುದು ಕೇವಲ 3 ತಿಂಗಳಲ್ಲಿ ಜನರಿಎ ಅರಿವಾಗಲಿದೆ. ಮೊದಲು ರಾಜ್ಯದ ಅಭಿವೃದ್ಧಿ, ರೈತರ ಅಭಿವೃದ್ಧಿ ಮತ್ತು ನೀರಾವರಿಎದೆಗೆ ಗಮನ ಹರಿಸುತ್ತೇನೆ ಎಂದು ಯಡಿಯೂರಪ್ಪ ಭರವಸೆ ನೀಡಿದರು. 


ಪ್ರಮಾಣವಚನ ಸ್ವೀಕಾರಕ್ಕೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರಾದ ಅಮಿತ್ ಷಾ ಅವರು, ಇಂದೇ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಮಾಣವಚನ ಸ್ವಿಕರಿಸಬೇಕು ಎಂದು ಸೂಚನೆ ನೀಡಿದ್ದರು. ಅದರಂತೆ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಸಂಜೆ 6 ಗಂಟೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.