ಕೋಲ್ಕತ್ತಾ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ಮತ್ತೆ ಮುಂದುವರೆದಂತೆ ಕಾಣುತ್ತಿದೆ. ಇಲ್ಲಿನ ಉತ್ತರ 24 ಪರಗಣ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ದುಷ್ಕರ್ಮಿಗಳು ಬಿಜೆಪಿ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ ಪಶ್ಚಿಮ ಬಂಗಾಳದ ನಾಡಿಯಾ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆಯಾದ ಬೆನ್ನಲ್ಲೇ ಭಾನುವಾರ ಮತ್ತೊಬ್ಬ ಕಾರ್ಯಕರ್ತನ ಹತ್ಯೆ ನಡೆದಿದೆ.
ಮೃತನನ್ನು ಚಂದನ್ ಶೌ(36) ಎಂದು ಗುರುತಿಸಲಾಗಿದ್ದು, ಭಾನುವಾರ ರಾತ್ರಿ ಮನೆಗೆ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಬೈಕಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಗುಂಡಿಟ್ಟು ಕೊಂದು ಪರಾರಿಯಾಗಿದ್ದಾರೆ. ಕೂಡಲೇ ಚಂದನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಕೊನೆಯುಸಿರೆಳೆದಿದ್ದಾರೆ. ಸದ್ಯ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.