close

News WrapGet Handpicked Stories from our editors directly to your mailbox

ಲೋಕಸಭೆ ಸ್ಪೀಕರ್ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ಸಂಸದ ಓಂ ಬಿರ್ಲಾ ಸಾಧ್ಯತೆ

ಓಂ ಬಿರ್ಲಾ ಅವರನ್ನು ಸ್ಪೀಕರ್ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರ್ಧರಿಸಿದ್ದಾರೆ ಎನ್ನಲಾಗಿದೆ.

Updated: Jun 18, 2019 , 12:12 PM IST
ಲೋಕಸಭೆ ಸ್ಪೀಕರ್ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ಸಂಸದ ಓಂ ಬಿರ್ಲಾ ಸಾಧ್ಯತೆ

ನವದೆಹಲಿ: ಲೋಕಸಭೆಯ ಸ್ಪೀಕರ್ ಹುದ್ದೆಗೆ ಭಾರತೀಯ ಜನತಾ ಪಕ್ಷದ ಸಂಸದ ಓಂ ಬಿರ್ಲಾ ಅವರು ಎನ್‌ಡಿಎ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ. 

ಲೋಕಸಭಾ ಚುನಾವಣೆಯಲ್ಲಿ ರಾಜಸ್ತಾನದ ಕೋಟ-ಬುಂಡಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಓಂ ಬಿರ್ಲಾ ಅವರನ್ನು ಸ್ಪೀಕರ್ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರ್ಧರಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ. ಓಂ ಬಿರ್ಲಾ ಅವರು ನಾಮನಿರ್ದೇಶನಗೊಂಡ ಬಳಿಕ ಎನ್‌ಡಿಎಗೆ ಸದನದಲ್ಲಿ ಸ್ಪಷ್ಟ ಬಹುಮತ ಇರುವುದರಿಂದ ಸುಲಭವಾಗಿ ಸ್ಪೀಕರ್ ಆಗಲಿದ್ದಾರೆ. 

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಜೆ.ಪಿ.ನಡ್ದಾ ನಿವಾಸಕ್ಕೆ ಇಂದು ಭೇಟಿ ನೀಡಿದ್ದ ಓಂ ಬಿರ್ಲಾ ಅವರು, ತಾವು ಸ್ಪೀಕರ್ ಸ್ಥಾನಕ್ಕೆ ನಾಮನಿರ್ದೇಶನಗೊಳ್ಳುತ್ತಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. "ಸ್ಪೀಕರ್ ಸ್ಥಾನದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಕೇವಲ ಒಬ್ಬ ಬಿಜೆಪಿ ಕಾರ್ಯಕರ್ತನಾಗಿ ಇಂದು ನಡ್ದಾ ಅವರನ್ನು ಭೇಟಿ ಮಾಡಲು ಹೋಗಿದ್ದೆ" ಎಂದು ಬಿರ್ಲಾ ತಿಳಿಸಿದ್ದಾರೆ.

ಆದರೆ ಇದೇ ವೇಳೆ ಸುದ್ದಿ ಸಂಸ್ಥೆ ಎಎನ್ಐಗೆ ಪ್ರತಿಕ್ರಿಯಿಸಿರುವ ಬಿರ್ಲಾ ಅವರ ಪತ್ನಿ ಅಮಿತಾ ಬಿರ್ಲಾ, "ಇದು ನಮಗೆ ಹೆಮ್ಮೆಯ, ಸಂತಸದ ಕ್ಷಣ. ಬಿರ್ಲಾ ಅವರನ್ನು ಆಯ್ಕೆ ಮಾಡಿರುವುದಕ್ಕಾಗಿ ಕ್ಯಾಬಿನೆಟ್‌ ಗೆ ನಮ್ಮ ಧನ್ಯವಾದಗಳು" ಎಂದು ಹೇಳಿದ್ದಾರೆ.