ಬಿಜೆಪಿ ಪದಾಧಿಕಾರಿಗಳ ಸಭೆ ಕರೆದ ಅಮಿತ್ ಶಾ, ನೂತನ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆ ಸಾಧ್ಯತೆ!
ಈ ಸಭೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೇ ಎಂದು ಹೇಳಲಾಗಿದೆ.
ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ) ಅಧ್ಯಕ್ಷ ಅಮಿತ್ ಶಾ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗುರುವಾರ ಪಕ್ಷದ ಪದಾಧಿಕಾರಿಗಳ ಸಭೆ ಕರೆದಿದ್ದಾರೆ. ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್, ಬಿಜೆಪಿ ನಾಯಕಿ ಉಮಾ ಭಾರ್ತಿ, ಜೆ.ಪಿ. ನಡ್ಡಾ ಮತ್ತು ದೆಹಲಿ ಘಟಕದ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಕೂಡ ಈ ಸಭೆಯಲ್ಲಿ ಉಪಸ್ಥಿತರಿದ್ದರು.
ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ಹಲವು ರಾಜ್ಯಗಳ ಅಧ್ಯಕ್ಷರನ್ನು ಬದಲಾಯಿಸುವುದು, ಪಕ್ಷ ಸಂಘಟನೆ ಹೀಗೆ ಹತ್ತು ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಕಳೆದ ವಾರ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಜಾರ್ಖಂಡ್, ಹರಿಯಾಣ ಮತ್ತು ಮಹಾರಾಷ್ಟ್ರಗಳಲ್ಲಿ ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ಸಿದ್ಧತೆ ಬಗ್ಗೆ ಚರ್ಚೆ ನಡೆಸಿದರು. ಮುಂಬರುವ ವಿಧಾನಸಭಾ ಚುನಾವಣೆಗಳ ದೃಷ್ಟಿಯಿಂದ ಚುನಾವಣೆಗೆ ಹೋಗುವ ರಾಜ್ಯಗಳಲ್ಲಿ ಪಕ್ಷ ಸಂಘಟನೆ ಹೇಗಿರಬೇಕು ಎಂಬುದರ ಬಗ್ಗೆ ಈ ವೇಳೆ ಸುದೀರ್ಘ ಚರ್ಚೆ ನಡೆದಿತ್ತು.