ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ದೇಶಾದ್ಯಂತ 'ವಿಜಯ ಸಂಕಲ್ಪ ಸಭೆ'ಯನ್ನು ಭಾನುವಾರದಿಂದ ಹಮ್ಮಿಕೊಂಡಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ವಿವರಿಸಿದ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, ಬಿಜೆಪ್ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪಕ್ಷದ ಹಿರಿಯ ನಾಯಕರು ಇಂದಿನಿಂದ ಮಾರ್ಚ್ 26ರ ವರೆಗೆ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ವಿಜಯ ಸಂಕಲ್ಪ ಸಭಾ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.
ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಹಾಗೂ ದೇಶದ ಭದ್ರತೆ, ಘನತೆ ಮತ್ತು ಸಮೃದ್ಧಿಗಾಗಿ ಕೈಗೊಂಡ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಜನತೆಗೆ ವಿವರಿಸಲಾಗುವುದು ಎಂದು ನಖ್ವಿ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಮಾರ್ಚ್ 24ರಂದು ಆಗ್ರಾದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಲಕ್ನೌದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್, ನಾಗಪುರದಲ್ಲಿ ಕೇಂದ್ರ ಸಚ್ಗಿವ ನಿತಿನ್ ಗಡ್ಕರಿ ಮತ್ತು ಗೌತಮಬುದ್ಧ ನಗರದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿಜಯ ಸಂಕಲ್ಪ ಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಪಾಟ್ನಾದಲ್ಲಿ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಸಂಭಾಲ್ ನಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡ, ಬರೇಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಪಿಯುಶ್ ಗೋಯಲ್, ಭಿಲ್ವಾರದಲ್ಲಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೆಕರ್, ಉಜ್ಜಯಿನಿಯಲ್ಲಿ ಕೇಂದ್ರ ಸಚಿವ ತವರ್ಚಂದ್ ಗೆಹ್ಲೋಟ್ ಮತ್ತು ಕಟಕ್ ನಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಭೆ ನಡೆಸಲಿದ್ದಾರೆ.
ಗ್ವಾಲಿಯರ್ ನಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಕಾನ್ಪುರದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಹೈದರಾಬಾದ್ ನಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ , ರಾಂಪುರ್ ನಲ್ಲಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ಭೋಪಾಲ್ ನಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಮತ್ತು ಆಗ್ರಾದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.