ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಕಡೆಗೂ ಷರತ್ತುಬದ್ಧ ಜಾಮೀನು ನೀಡಿ ದೆಹಲಿ ಹೈಕೋರ್ಟ್ ಬುಧವಾರ ಆದೇಶ ಹೊರಡಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಿದ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಸುರೇಶ್ ಕುಮಾರ್ ಕೈಟ್, ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದರು.
ಆದೇಶದಲ್ಲಿ 25 ಲಕ್ಷ ರೂಪಾಯಿ ಶ್ಯೂರಿಟಿ ನೀಡುವಂತೆ ಹಾಗೂ ವಿಚಾರಣೆಗೆ ಕರೆದಾಗ ಹಾಜರಾಗುವಂತೆ ನ್ಯಾಯಾಧೀಶರು ಸೂಚನೆ ನೀಡಿದ್ದು, ಅನುಮತಿ ಇಲ್ಲದೆ ವಿದೇಶಕ್ಕೆ ತೆರಳಬಾರದು, ಪಾಸ್ಪೋರ್ಟ್ ಸರಂಡರ್ ಮಾಡಬೇಕು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಲಾಗಿದೆ. ಈ ಮೂಲಕ ಕಳೆದ 48 ದಿನಗಳಿಂದ ಜೈಲಿನಲ್ಲಿದ್ದ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.