close

News WrapGet Handpicked Stories from our editors directly to your mailbox

ಸಿಎಂ ಬಿಎಸ್‍ವೈ-ಫಡ್ನವೀಸ್ ಮಹತ್ವದ ಸಭೆ: ಮಹದಾಯಿ, ಕೃಷ್ಣಾ ತೀರ್ಪಿನ ಬಗ್ಗೆ ಕೈಗೊಂಡ ನಿರ್ಧಾರಗಳೇನು?

ಕರ್ನಾಟಕ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಮುಖ್ಯಮಂತ್ರಿ ಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಿ ಶೀಘ್ರವೇ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು‌ ಸಭೆಯಲ್ಲಿ ನಿರ್ಧರಿಸಲಾಯಿತು.

Divyashree K Divyashree K | Updated: Sep 3, 2019 , 06:10 PM IST
ಸಿಎಂ ಬಿಎಸ್‍ವೈ-ಫಡ್ನವೀಸ್ ಮಹತ್ವದ ಸಭೆ: ಮಹದಾಯಿ, ಕೃಷ್ಣಾ ತೀರ್ಪಿನ ಬಗ್ಗೆ ಕೈಗೊಂಡ ನಿರ್ಧಾರಗಳೇನು?

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮಂಗಳವಾರ ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಮಹದಾಯಿ ಮತ್ತು ಕೃಷ್ಣಾ ಬಗ್ಗೆ ನ್ಯಾಯಾಧಿಕರಣದ ತೀರ್ಪಿನ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನ ಕೈಗೊಳ್ಳಲಾಗಿದೆ. 

ಸಿಎಂ ಬಿಎಸ್‍ವೈ-ಫಡ್ನವೀಸ್ ಮಹತ್ವದ ಸಭೆಯಲ್ಲಿ ಕೈಗೊಂಡ ನಿರ್ಧಾರಗಳು

* ಮಹದಾಯಿ ನದಿ ವಿವಾದ ನ್ಯಾಯಾಧಿಕರಣ ನೀರು ಹಂಚಿಕೆ ಮಾಡಿ ನೀಡಿರುವ ಆದೇಶವನ್ನು ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿದೆ. ಈ‌ ನಿಟ್ಟಿನಲ್ಲಿ ಕರ್ನಾಟಕ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಮುಖ್ಯಮಂತ್ರಿ ಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಿ ಶೀಘ್ರವೇ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು‌ ನಿರ್ಧರಿಸಲಾಯಿತು.

* ಕೃಷ್ಣಾ ನ್ಯಾಯಾಧಿಕರಣದ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ‌ಮತ್ತು ಮಹಾರಾಷ್ಟ್ರ ರಾಜ್ಯಗಳು ಸುಪ್ರೀಂ ಕೋರ್ಟ್‌ನಲ್ಲಿ ಜಂಟಿಯಾಗಿ ಅಫಿಡವಿಟ್ ಸಲ್ಲಿಸಿ ನೀರು ಹಂಚಿಕೆ ಆದೇಶವನ್ನು ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ನಿರ್ಧರಿಸಲಾಯಿತು.

* ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಗಾರು ಪ್ರಾರಂಭವಾದ ಕೂಡಲೇ ಕೊಯ್ನಾ ಜಲಾಶಯದಿಂದ ಹಂತ ಹಂತವಾಗಿ ನೀರು ಬಿಡುವಂತೆ ಹಾಗು ಈ ಪ್ರಕ್ರಿಯೆಯ ಮೇಲ್ವಿಚಾರಣೆಗೆ ಉನ್ನತ ಮಟ್ಟದ ಸಮನ್ವಯ ಸಮಿತಿಯನ್ನು ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

* ಮುಂಬಯಿ-ಬೆಂಗಳೂರು ಕೈಗಾರಿಕಾ ಕಾರಿಡಾರ್ ರಚನೆಗೆ ಈಗಾಗಲೇ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ ಯೋಜನೆಗೆ ಚಾಲನೆ ನೀಡುವ ಬಗ್ಗೆ ಉಭಯ ಸರ್ಕಾರಗಳು ಜಂಟಿಯಾಗಿ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.

* ಕಳೆದ ಆಗಸ್ಟ್ ನಲ್ಲಿ ಮಹಾರಾಷ್ಟ್ರ ಹಾಗು ಕರ್ನಾಟಕದಲ್ಲಿ ಉದ್ಭವಿಸಿದ ಪ್ರವಾಹ ಪರಿಸ್ಥಿತಿಯ ನಿರ್ವಹಣೆ ಹಾಗು ಪರಿಹಾರ ಕಾರ್ಯಗಳಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಅನುದಾನ ಒದಗಿಸುವಂತೆ ಎರಡೂ ರಾಜ್ಯಗಳಿಂದ ಜಂಟಿಯಾಗಿ ಮನವಿ ಸಲ್ಲಿಸಲು ತೀರ್ಮಾನ ಕೈಗೊಳ್ಳಲಾಯಿತು.

ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗು ಮಹಾರಾಷ್ಟ್ರ ರಾಜ್ಯದ ನೀರಾವರಿ ಸಚಿವರಾದ ಗಿರೀಶ್ ದತ್ತಾತ್ರೇಯ ಮಹಾಜನ್ ಹಾಗು ಇಂಧನ ಸಚಿವರಾದ ಚಂದ್ರಶೇಖರ್ ಕಿಶನ್ ರಾವ್ ಈ ಸಭೆಯಲ್ಲಿ ಉಪಸ್ಥಿತರಿದ್ದರು.