ಇಡಿ ಬಲೆಯಲ್ಲಿ ಡಿ.ಕೆ. ಶಿವಕುಮಾರ್; ಸಿದ್ದರಾಮಯ್ಯ ಏನಂದ್ರು?
ಇತ್ತೀಚೆಗೆ ಅಧಿಕಾರ ದುರುಪಯೋಗದ ಕೆಲಸ ನಡೆಯುತ್ತಿದೆ ಎನಿಸುತ್ತಿದೆ ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಹರಿಹೈದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.
ಮೈಸೂರು: ಇಡಿ ಬಲೆಯಲ್ಲಿ ಸಿಲುಕಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನ್ಯಾಚುರಲ್ ಜಸ್ಟೀಸ್ ಇರಬೇಕು. ಆದರೆ ಇಂದಿನ ದಿನಗಳಲ್ಲಿ ಅದು ಕಾಣೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರಿಗೆ ಇಡಿ ಸಮನ್ಸ್ ನೀಡಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಹೈಕೋರ್ಟ್‌ನಲ್ಲಿ ಅವರು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಈ ಹಿನ್ನೆಲೆಯಲ್ಲಿ ಅವರ ಕಾನೂನು ಹೋರಾಟ ಮುಂದುವರೆಯಲಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಲಿದ್ದಾರೆ ಎಂದರು.
ಡಿ.ಕೆ.ಶಿವಕುಮಾರ್ ಅವರನ್ನು ಅರೆಸ್ಟ್ ಮಾಡುವಂತ ಕೇಸು ಇದಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹೈದ ಸಿದ್ದರಾಮಯ್ಯ, ಯಾರೂ ಕೂಡ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುವ ಕೆಲಸ ಮಾಡಬಾರದು. ಆದರೆ ಇತ್ತೀಚಿನ ದಿನಗಳಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುವ ಕೆಲಸ ನಡೆಯುತ್ತಿದೆ ಎಂದು ನನಗೆ ಅನಿಸುತ್ತಿದೆ ಎಂದು ಹೇಳಿದರು.