ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋದ ಡಿ.ಕೆ.ಶಿವಕುಮಾರ್
ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಅವರು ಗುರುವಾರ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಕರ್ನಾಟಕ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಅವರು ಗುರುವಾರ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ದೆಹಲಿಯ ರೋಸ್ ಅವೆನ್ಯೂ ರಸ್ತೆಯಲ್ಲಿರುವ ಇಡಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರು ಡಿಕೆಶಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬುಧವಾರ ತಿರಸ್ಕರಿದ್ದರು. ಹೀಗಾಗಿ ಅಕ್ಟೋಬರ್ 1ರವರೆಗೆ ತಿಹಾರ್ ಜೈಲಿನಲ್ಲೇ ಡಿಕೆಶಿ ಕಾಲ ಕಳೆಯಬೇಕಿದೆ. ಈ ಮಧ್ಯೆ ಡಿಕೆಶಿ ಪರ ವಕೀಲರು ದೆಹಲಿ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಇಡಿ ಡಿಕೆಶಿ ಅವರನ್ನು ಬಂಧಿಸಿರುವುದರಿಂದ ಡಿಕೆಶಿ ಪರ ವಕೀಲರು ದೆಹಲಿ ಹೈಕೋರ್ಟ್ ನಲ್ಲಿಯೇ ಇಂದು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಜಾರಿ ನಿರ್ದೇಶನಾಲಯದಲ್ಲಿ ಡಿ.ಕೆ. ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರ ತಂಡವೇ ಇಲ್ಲಿಯೂ ವಾದ ಮಂಡಿಸಲಿದೆ. ಆದರೆ ದೆಹಲಿ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ಯಾವಾಗ ನಡೆಯಲಿದೆ, ಡಿಕೆಶಿ ಅವರಿಗೆ ಜಾಮೀನು ಸಿಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಸೆಪ್ಟೆಂಬರ್ 3 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುಧೀರ್ಘ ವಿಚಾರಣೆಯ ಬಳಿಕ ಡಿಕೆಶಿ ಅವರನ್ನು ದೆಹಲಿಯಲ್ಲಿ ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಡಿಕೆಶಿ ಸದ್ಯ ತಿಹಾರ್ ಜೈಲಿನಲ್ಲಿದ್ದಾರೆ.