ರಾಜೀನಾಮೆ ಹಿಂಪಡೆಯಲು ಒಲ್ಲೆ ಎಂದ ರಾಹುಲ್, ಯಾರಾಗಲಿದ್ದಾರೆ ಮುಂದಿನ ಕಾಂಗ್ರೆಸ್ ಅಧ್ಯಕ್ಷ?

ರಾಹುಲ್ ಗಾಂಧಿ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯಲು ಒಪ್ಪುತ್ತಿಲ್ಲ. ಈ ಬಗ್ಗೆ ಹಿರಿಯ ಕಾಂಗ್ರೆಸ್ ಮುಖಂಡರೊಂದಿಗೆ ಮಾತನಾಡಿರುವ ರಾಹುಲ್ ತಾವು ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯಲು ಬಯಸುವುದಿಲ್ಲ ಎಂದಿದ್ದಾರೆ ಎನ್ನಲಾಗಿದೆ.

Last Updated : May 28, 2019, 10:12 AM IST
ರಾಜೀನಾಮೆ ಹಿಂಪಡೆಯಲು ಒಲ್ಲೆ ಎಂದ ರಾಹುಲ್, ಯಾರಾಗಲಿದ್ದಾರೆ ಮುಂದಿನ ಕಾಂಗ್ರೆಸ್ ಅಧ್ಯಕ್ಷ? title=
Pic Courtesy: PTI

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ನೈತಿಕ ಜವಾಬ್ದಾರಿ ಹೊತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಹುಲ್ ಗಾಂಧಿಯವರ ರಾಜೀನಾಮೆಯಿಂದ ಅಕ್ಷರ ಸಹ ಕಂಗೆಟ್ಟಿರುವ ಹಿರಿಯ ಕಾಂಗ್ರೆಸ್ ಮುಖಂಡರು ರಾಹುಲ್ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. ರಾಹುಲ್ ಗಾಂಧಿ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯಲು ಒಪ್ಪುತ್ತಿಲ್ಲ. 

ಈ ಬಗ್ಗೆ ಹಿರಿಯ ಕಾಂಗ್ರೆಸ್ ಮುಖಂಡರೊಂದಿಗೆ ಮಾತನಾಡಿರುವ ರಾಹುಲ್ ತಾವು ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯಲು ಬಯಸುವುದಿಲ್ಲ ಎಂದಿದ್ದಾರೆ ಎನ್ನಲಾಗಿದೆ. ಮೂಲಗಳಿಂದ ಲಭಿಸಿರುವ ಮಾಹಿತಿ ಪ್ರಕಾರ ಕಾಂಗ್ರೆಸ್ ಮುಖಂಡರು ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರ ಬಳಿಯೂ ಈ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ಮುಂದಿನ ಕಾಂಗ್ರೆಸ್ ಅಧ್ಯಕ್ಷರು ಯಾರಾಗಲಿದ್ದಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

ರಾಹುಲ್ ಗಾಂಧಿಯವರು ಸೋಮವಾರ ಪಕ್ಷದ ಹಿರಿಯ ನಾಯಕರಾದ ಅಹ್ಮದ್ ಪಟೇಲ್ ಮತ್ತು ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದು, ರಾಜೀನಾಮೆ ಹಿಂತೆಗೆದುಕೊಳ್ಳುವಂತೆ ಒತ್ತಾಯ ಮಾಡಬೇಡಿ. ನಾನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕ ಗಾಂಧಿ ಹೆಸರನ್ನೂ ಪ್ರಸ್ತಾಪಿಸಬಾರದು ಎಂದು ರಾಹುಲ್ ತಿಳಿಸಿದ್ದಾರೆ.  ಇದೇ ವೇಳೆ ಪಕ್ಷದ ಅಧ್ಯಕ್ಷ ಸ್ಥಾನ ನೆಹರೂ ಕುಟುಂಬದ ಹೊರತಾಗಿರಬೇಕು ಎಂದು ರಾಹುಲ್ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Trending News