ನವದೆಹಲಿ: ಹನ್ನೆರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸುವ ತಿದ್ದುಪಡಿ ಮಸೂದೆಯನ್ನು ಸೋಮವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.


COMMERCIAL BREAK
SCROLL TO CONTINUE READING

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಬಾಲಕಿ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣ ಹಾಗೂ ಉತ್ತರ ಪ್ರದೇಶದ ಉನ್ನಾವೊ ಅತ್ಯಾಚಾರ ಪ್ರಕರಣಗಳ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸುವಂತೆ ಹಲವು ಹೋರಾಟಗಾರರು ಆಗ್ರಹಿಸಿದ್ದರು.


ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಿಮಿನಲ್‌ ಕಾನೂನು ತಿದ್ದುಪಡಿಗೆ ಏಪ್ರಿಲ್‌ 21ರಂದು ಸುಗ್ರೀವಾಜ್ಞೆ ಹೊರಡಿಸಿತ್ತು. ಅಪರಾಧ ಕಾನೂನು(ತಿದ್ದುಪಡಿ) ಮಸೂದೆ 2018 ಅನ್ನು ಬಹುತೇಕ ರಾಜಕೀಯ ಪಕ್ಷಗಳ ಸದಸ್ಯರು ಬೆಂಬಲಿಸಿದ್ದು, ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಈಗ ಅಂಗೀಕಾರವಾಗಿರುವ ವಿಧೇಯಕವು ಮಹಿಳೆಯರು ಹಾಗೂ ಮಕ್ಕಳಿಗೆ ರಕ್ಷಣೆ ನೀಡುವಲ್ಲಿ ನೆರವಾಗಲಿದೆ ಎಂದು ಗೃಹ ಖಾತೆ ಸಹಾಯಕ ಸಚಿವ ಕಿರಣ್‌ ರಿಜಿಜು ತಿಳಿಸಿದ್ದಾರೆ. 



ಪ್ರಸ್ತುತ ಭಾರತೀಯ ದಂಡ ಸಂಹಿತೆ (ಐಪಿಸಿ)ಅಡಿಯಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರಿಗಳಿಗೆ ಶಿಕ್ಷೆ ವಿಧಿಸುವ ಬಗ್ಗೆ ಪ್ರಸ್ತಾಪವಿದೆ. 16 ವರ್ಷ ಅಥವಾ 12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಅಥವಾ ಸಾಮೂಹಿಕ ಅತ್ಯಾಚಾರ ನಡೆದರೆ ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸಲು ಅವಕಾಶ ಇಲ್ಲ ಎಂದು ಕಿರಣ್‌ ರಿಜಿಜು ಮಾಹಿತಿ ನೀಡಿದ್ದಾರೆ.