ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ತೀವ್ರ ಹಿನ್ನಡೆಯಾಗಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಉರುಳಾಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ನೋಟಿಸ್ ವಿರುದ್ಧ 2011-12ನೇ ಸಾಲಿನಲ್ಲಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ ಎಂದು ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಮತ್ತು ಎ.ಕೆ.ಚಾವ್ಲಾ ಅವರಿದ್ದ ಪೀಠ ತಿಳಿಸಿದೆ. ಅಲ್ಲದೆ, ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅರ್ಜಿಯನ್ನೂ ಹೈಕೋರ್ಟ್ ತಿರಸ್ಕರಿಸಿದೆ.
ಈ ಮೂವರೂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ಆಗಸ್ಟ್ 16ರಂದು ತೀರ್ಪು ಕಾಯ್ದಿರಿಸಿತ್ತು. ರಾಹುಲ್ ಗಾಂಧಿಯವರ 2011-12 ಆದಾಯ ತೆರಿಗೆ ಮೌಲ್ಯಮಾಪನವು ಮರು-ತೆರೆಯಲ್ಪಟ್ಟಿದೆ ಎಂದು ಆ ಸಮಯದಲ್ಲಿ ಆದಾಯ ತೆರಿಗೆ ಇಲಾಖೆ ವಾದಿಸಿತ್ತು. ಅದರಲ್ಲಿ ಹಲವು ಅಂಶಗಳನ್ನು ಮರೆಮಾಚಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ವಾದಿಸಿತ್ತು.
ರಾಹುಲ್ ಗಾಂಧಿ ಸೋನಿಯಾ ಗಾಂಧಿ ಅವರ ಪ್ರಮುಖ ಪಾಲುದಾರಿಕೆಯನ್ನು ಹೊಂದಿರುವ ಯಂಗ್ ಇಂಡಿಯನ್ ಪ್ರೈ.ಲಿ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸುತ್ತಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್(ಎಜೆಎಲ್)ನ್ನೂ ಸ್ವಾಧೀನಪಡಿಸಿಕೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಇಬ್ಬರೂ ಕಾಂಗ್ರೆಸ್ ನಾಯಕರ ವಿರುದ್ಧ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದರು.