ಡಿಕೆಶಿ ಬಳಿಕ ಡಿ.ಕೆ.ಸುರೇಶ್ಗೆ ಎದುರಾದ ಸಂಕಷ್ಟ; ಇಡಿ ನೋಟಿಸ್
ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಆಫಿಡವಿಟ್ ನಲ್ಲಿ ಡಿ.ಕೆ. ಸುರೇಶ್ ಅವರು 338 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ.
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಡಿ.ಕೆ.ಶಿವಕುಮಾರ್ ಕುಟುಂಬದ ವಿಚಾರಣೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಸಹೋದರ, ಸಂಸದ ಡಿ.ಕೆ.ಸುರೇಶ್ ಅವರಿಗೂ ಕೂಡ ನೋಟಿಸ್ ಜಾರಿ ಮಾಡಿದೆ.
ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ಡಿ.ಕೆ. ಸುರೇಶ್ ಅವರು 338 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ. ಅಲ್ಲದೆ, ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಅವರಿಗೂ ಸಾಲ ನೀಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ತಂದೆ ಕೆಂಪೇಗೌಡ ಅವರ ಆಸ್ತಿಯನ್ನು ಡಿ.ಕೆ.ಸುರೇಶ್ ಅವರಿಗೆ ವರ್ಗಾವಣೆ ಮಾಡಲಾಗಿದೆ ಎಂದೂ ಸಹ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಇಡಿ ನೋಟಿಸ್ ಜಾರಿ ಮಾಡಿದೆ.
ಡಿ.ಕೆ.ಶಿವಕುಮಾರ್ ಅವರ ಬಂಧನವಾದ ದಿನದಿಂದ ಅವರ ಬಿಡುಗಡೆಗಾಗಿ ಸಾಕಷ್ಟು ಪ್ರಯತ್ನಿಸುತ್ತಿರುವ ಡಿ.ಕೆ.ಸುರೇಶ್ ಅವರಿಗೇ ಇಡಿ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಿರುವಂತೆ ಸೂಚನೆ ನೀಡಿದ್ದು, ಸುರೇಶ ಅವರ ಇತರ ವ್ಯವಹಾರಗಳ ಬಗ್ಗೆಯೂ ಇಡಿ ವಿಚಾರಣೆ ನಡೆಸಲಿದೆ ಎನ್ನಲಾಗಿದೆ.