ಗುರುದಾಸ್‌ಪುರ: ಇಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ. 


COMMERCIAL BREAK
SCROLL TO CONTINUE READING

ಇಂದು ಸಂಜೆ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಸುತ್ತಮುತ್ತಲಿನ ಸುಮಾರು 10 ಕಟ್ಟಡಗಳು ಹಾನಿಗೊಳಗಾಗಿವೆ. ಕಟ್ಟಡದ ಅವಶೇಷಗಳಡಿಯಲ್ಲಿ ಮತ್ತಷ್ಟು ಜನರು ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿದೆ. 


ವಿಷಯ ತಿಳಿಯುತ್ತಿದ್ದಂತೆ  ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕೂಡಲೇ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದವರು ಬೆನ್ಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸ್ಫೋಟಕ್ಕೆ ನಿಖರವಾದ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ "ಬಟಾಲಾದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟದಿಂದಾಗಿ ಪ್ರಾಣಹಾನಿ ಸಂಭವಿಸಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಡಿಸಿ ಮತ್ತು ಎಸ್ಎಸ್ಪಿ ನೇತೃತ್ವದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ನಡೆಯುತ್ತಿವೆ" ಎಂದು ಟ್ವೀಟ್ ಮಾಡಿದ್ದಾರೆ.

ಸ್ಫೋಟ ಮತ್ತು ಪ್ರಾಣಹಾನಿ ಬಗ್ಗೆ ಪಂಜಾಬ್ ಕಂದಾಯ ಮತ್ತು ಪುನರ್ವಸತಿ ಸಚಿವ ಗುರ್‌ಪ್ರೀತ್ ಸಿಂಗ್ ಕಾಂಗರ್ ಸಹ ದುಃಖ ವ್ಯಕ್ತಪಡಿಸಿದ್ದು, ಈ ಕೂಡಲೇ ಸರ್ಕಾರದ ವತಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.


ಮೂಲಗಳ ಪ್ರಕಾರ, ಸ್ಫೋಟದಿಂದಾಗಿ ಪಟಾಕಿ ಕಾರ್ಖಾನೆ ಸಂಪೂರ್ಣವಾಗಿ ಕುಸಿದಿದ್ದು, ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಪರಿಹಾರ ಕಾರ್ಯದಲ್ಲಿ ತೊಡಗಿವೆ. ಕಟ್ಟಡದ ಅವಶೇಷಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಿ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಜೆಸಿಬಿಯ ಸಹಾಯದಿಂದ ಪರಿಹಾರ ಕಾರ್ಯಗಳು ತ್ವರಿತಗತಿಯಲ್ಲಿ ಸಾಗುತ್ತಿದ್ದು, ಆಂಬ್ಯುಲೆನ್ಸ್ ಮತ್ತು ಪೊಲೀಸ್ ತಂಡಗಳು ಕಾರ್ಯಪ್ರವೃತ್ತವಾಗಿವೆ.