ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಐವರ ದುರ್ಮರಣ
ವೋಲ್ವೋ ಬಸ್ ಸಂಖ್ಯೆ ಯುಪಿ83 ಬಿಟಿ 4106 ಗುರುಗ್ರಾಮದಿಂದ ಬಿಹಾರದ ಮಧುಬಾನಿಗೆ ಹೋಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನವದೆಹಲಿ/ಲಕ್ನೋ: ಉತ್ತರಪ್ರದೇಶದ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್ ವೇನಲ್ಲಿ ಟ್ರ್ಯಾಕ್ಟರ್ ಮತ್ತು ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬಸ್ ಪಲ್ಟಿ ಹೊಡೆದ ಪರಿಣಾಮ ಐವರು ದಾರುಣವಾಗಿ ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶನಿವಾರ ಬೆಳಿಗ್ಗೆ ಬಂಗಾರಾವ್ ಕೊಟ್ವಾಲಿದ ದೇವಖರಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದ್ದು, ವೋಲ್ವೋ ಬಸ್ ಸಂಖ್ಯೆ ಯುಪಿ83 ಬಿಟಿ 4106 ಗುರುಗ್ರಾಮದಿಂದ ಬಿಹಾರದ ಮಧುಬಾನಿಗೆ ಹೋಗುತ್ತಿದೆ. ಟ್ರಾಕ್ಟರ್ ಟ್ರಾಲಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಬಸ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ಎಸ್ಒ ಅರ್ವಿಂದ್ ಸಿಂಗ್ ಹೇಳಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಮೊದಲು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಗಂಭೀರವಾಗಿ ಗಾಯಗೊಂಡವರನ್ನು ಲಕ್ನೋ ಟ್ರಾಮಾ ಸೆಂಟರ್ಗೆ ಶಿಫ್ಟ್ ಮಾಡಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅವರ ಸಂಬಂಧಿಕರಿಗೆ ವಿಷಯ ಮುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.