ಬೆಂಗಳೂರು: ಸದನದಲ್ಲಿಂದು ವಿಶ್ವಾಸ ಮತಯಾಚನೆ ವೇಳೆ ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾದ ಬಳಿಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು.


COMMERCIAL BREAK
SCROLL TO CONTINUE READING

ಇವರಿಗೆ ಮೈತ್ರಿ ಪಕ್ಷಗಳ ಶಾಸಕರಾದ ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಹೆಚ್.ಡಿ.ರೇವಣ್ಣ, ಸಾರಾ ಮಹೇಶ್, ಶಿವಲಿಂಗೇಗೌಡ ಸೇರಿದಂತೆ ಅನೇಕರು ಸಾಥ್ ನೀಡಿದರು. 



ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲ ವಜುಬಾಯಿ ವಾಲ ಅವರು, ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೂ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಕುಮಾರಸ್ವಾಮಿ ಅವರಿಗೆ ಸೂಚನೆ ನೀಡಿದ್ದಾರೆ.



ಗುರುವಾರದಂದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದ್ದು, ನಾಳೆ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲಿಯವರೆಗೆ ಕುಮಾರಸ್ವಾಮಿಯವರು ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.


ಈ ಮೂಲಕ ಹೆಚ್.ಡಿ.ಕುಮಾರಸ್ವಾಮಿ 14 ತಿಂಗಳ ಹಿಂದೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವಿಕರಿಸಿದ ದಿನದಂದೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತಾಗಿದೆ. 2018ರ ಮೇ 23ರಂದು ಕುಮಾರಸ್ವಾಮಿ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.